ADVERTISEMENT

ಪರಿಶೀಲನೆಗೆ ಹೈಕೋರ್ಟ್ ಆದೇಶ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2012, 20:10 IST
Last Updated 21 ಡಿಸೆಂಬರ್ 2012, 20:10 IST

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬರುವ 27 ವಿಧಾನಸಭಾ ಕ್ಷೇತ್ರಗಳ ಅಂದಾಜು 10 ಲಕ್ಷ ಜನರ ಹೆಸರು ಮತದಾರರ ಪಟ್ಟಿಯಿಂದ ಕೈಬಿಟ್ಟುಹೋಗಿರುವ ಕುರಿತು ಪರಿಶೀಲನೆ ನಡೆಸುವಂತೆ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಅವರಿಗೆ ಹೈಕೋರ್ಟ್ ಆದೇಶ ನೀಡಿದೆ.

ಮತದಾರರ ಪಟ್ಟಿಯಿಂದ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಹೆಸರು ಕೈಬಿಟ್ಟಿರುವುದನ್ನು ಸರಿಪಡಿಸುವಂತೆ ಮುಖ್ಯ ಚುನಾವಣಾ ಅಧಿಕಾರಿಯವರಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಕಮಾಂಡರ್ (ನಿವೃತ್ತ) ಪಿ.ಜಿ. ಭಟ್ ಮತ್ತು ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ಈ ಆದೇಶ ನೀಡಿದೆ.

`ಅರ್ಜಿಯಲ್ಲಿ ಉಲ್ಲೇಖಿಸಿರುವ ವಿಚಾರಗಳು ಆಧಾರ ರಹಿತವಲ್ಲ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ತಪ್ಪಾಗಿ ಕೈಬಿಡಲಾಗಿದೆ' ಎಂದು ನ್ಯಾಯಪೀಠ ಆದೇಶದಲ್ಲಿ ಹೇಳಿದೆ.

ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಿ, ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಇದೇ 31ರವರೆಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಇದೆ ಎಂದು ಮುಖ್ಯ ಚುನಾವಣಾ ಅಧಿಕಾರಿ ಪರ ವಕೀಲರು ವಾದಿಸಿದ್ದನ್ನು ಉಲ್ಲೇಖಿಸಿ, `ಆಕ್ಷೇಪಣೆಗಳನ್ನು ಪರಿಗಣಿಸಿ, ಕರಡು ಪಟ್ಟಿಯಲ್ಲಿ ತಿದ್ದುಪಡಿ ತರಬೇಕು. ಮತದಾರರ ಅಂತಿಮ ಪಟ್ಟಿಯನ್ನು ಜನವರಿ 28ರಂದು ಪ್ರಕಟಿಸಬೇಕು' ಎಂದು ಹೈಕೋರ್ಟ್ ವಿಭಾಗೀಯ ಪೀಠವು ನಿರ್ದೇಶನ ನೀಡಿದೆ.

ಸಾರ್ವಜನಿಕರಿಂದ ಆಕ್ಷೇಪಣೆಗಳು ಬರಲಿ, ಬಾರದಿರಲಿ. ಈ ಅರ್ಜಿಯಲ್ಲಿ ಉಲ್ಲೇಖಿಸಿರುವ ಅಂಶಗಳ ಕುರಿತು ಮುಖ್ಯ ಚುನಾವಣಾ ಅಧಿಕಾರಿಯವರು ಸ್ವಯಂಪ್ರೇರಿತವಾಗಿ ಪರಿಶೀಲನೆ ನಡೆಸಬೇಕು ಎಂದೂ ನ್ಯಾಯಪೀಠ ತಾಕೀತು ಮಾಡಿದೆ.
ಅರ್ಜಿಯನ್ನು ಇತ್ಯರ್ಥಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.