ಬೆಂಗಳೂರು: ಥಣಿಸಂದ್ರ ಗ್ರಾಮದಲ್ಲಿನ 3.08 ಎಕರೆ ಭೂಮಿಯನ್ನು ಕಾನೂನುಬಾಹಿರವಾಗಿ ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟ ಆರೋಪದ ಹಿನ್ನೆಲೆಯಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಲೋಕಾಯುಕ್ತ ಪೊಲೀಸರಿಗೆ ಮಂಗಳವಾರ ನೋಟಿಸ್ ಜಾರಿಗೆ ಆದೇಶಿಸಿದೆ.
ಚಾಮರಾಜನಗರ ಜಿಲ್ಲೆಯ ಸಂತೆಮರಳ್ಳಿಯ ಮಹದೇವಸ್ವಾಮಿ ಎಂಬುವರು ಇವರ ವಿರುದ್ಧ ಲೋಕಾಯುಕ್ತ ವಿಶೇಷ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಖಾಸಗಿ ದೂರಿಗೆ ಸಂಬಂಧಿಸಿದಂತೆ ತನಿಖೆ ನಡೆಸಿ ವರದಿ ನೀಡುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಜನವರಿಯಲ್ಲಿ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿತ್ತು.
ಈ ಆದೇಶದ ಹಿನ್ನೆಲೆಯಲ್ಲಿ, ಸೋಮವಾರ (ಏ.16) ಲೋಕಾಯುಕ್ತ ಪೊಲೀಸರು ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ಇದರ ಆಧಾರದ ಮೇಲೆ ತಮ್ಮನ್ನು ಬಂಧಿಸುವ ಸಾಧ್ಯತೆ ಇರುವ ಕಾರಣ, ಬಂಧಿಸದಂತೆ ಪೊಲೀಸರಿಗೆ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕುಮಾರಸ್ವಾಮಿ ಕೋರಿದ್ದಾರೆ.
ತಾವು ನಿರಪರಾಧಿಯಾಗಿದ್ದು, ವಿನಾಕಾರಣ ತಮ್ಮ ವಿರುದ್ಧ ಆರೋಪ ಹೊರಿಸಲಾಗಿದೆ ಎನ್ನುವುದು ಕುಮಾರಸ್ವಾಮಿ ಅವರ ವಾದ. ನ್ಯಾಯಮೂರ್ತಿ ಕೆ.ಎನ್.ಕೇಶವನಾರಾಯಣ ಅವರು ವಿಚಾರಣೆಯನ್ನು ಇದೇ 24ಕ್ಕೆ ಮುಂದೂಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.