ADVERTISEMENT

ಪ್ರತಿಭಟನೆ: ತಪ್ಪಿತಸ್ಥ ವಕೀಲರ ವಿರುದ್ಧ ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2012, 19:20 IST
Last Updated 3 ಮಾರ್ಚ್ 2012, 19:20 IST

ಯಲಹಂಕ: ಸಿಟಿ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ವಕೀಲರು ಪತ್ರಕರ್ತರ ಮೇಲೆ ನಡೆಸಿದ ಹಲ್ಲೆಯನ್ನು ಖಂಡಿಸಿ ಹಾಗೂ ತಪ್ಪಿತಸ್ಥ ವಕೀಲರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಯಲಹಂಕ ವಿಭಾಗದ ಪತ್ರಕರ್ತರು, ವಿವಿಧ ಸಂಘ-ಸಂಸ್ಥೆಗಳ ಸದಸ್ಯರು ಹಾಗೂ ವಿದ್ಯಾರ್ಥಿಗಳು ಇಲ್ಲಿನ ಪೊಲೀಸ್ ಠಾಣೆ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಪತ್ರಕರ್ತರ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದ್ದರೂ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಸಿಟಿ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ ತಪ್ಪಿತಸ್ಥ ವಕೀಲರನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಪತ್ರಕರ್ತರಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ತಪ್ಪಿದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಸುಮಾರು 15 ನಿಮಿಷಗಳ ಕಾಲ ಮಾನವ ಸರಪಳಿ ನಿರ್ಮಿಸಿದ ಪ್ರತಿಭಟನಾಕಾರರು, ವಕೀಲರ ಪ್ರತಿಕೃತಿಯನ್ನು ದಹಿಸಿದರು.

ದಲಿತ ಸಂಘರ್ಷ ಸಮಿತಿ (ಸಮತಾ ವಾದ) ರಾಜ್ಯ ಉಪ ಪ್ರಧಾನ ಸಂಚಾಲಕ ಎಚ್.ಮಾರಪ್ಪ, ಪಿವಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮುನಿ ಆಂಜಿನಪ್ಪ, ನಾಗರಿಕ ಹಿತರಕ್ಷಣಾ ವೇದಿಕೆಯ ಅ.ಬ.ಶಿವಕುಮಾರ್, ಗೋಪಿ, ಪತ್ರಿಕೆ ವಿತರಕರ ಸಂಘದ ಅಧ್ಯಕ್ಷ ಸತೀಶ್, ಔಷಧಿ ವ್ಯಾಪಾರಿಗಳ ಸಂಘದ ಬಸವರಾಜ ಜಗದಾಳೆ, ಸವಿತಾ ಸಮಾಜದ ಲಕ್ಷ್ಮೀನಾರಾಯಣ ಭಾಗವಹಿಸಿದ್ದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.