ADVERTISEMENT

`ಪ್ರತಿಭಾವಂತರಿಗೆ ಪ್ರೋತ್ಸಾಹ ಅಗತ್ಯ'

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2012, 19:59 IST
Last Updated 18 ಡಿಸೆಂಬರ್ 2012, 19:59 IST

ನೆಲಮಂಗಲ: ಪ್ರತಿಭಾವಂತರನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಅವರಿಂದ ಇನ್ನೂ ಹೆಚ್ಚಿನ ಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದು ಮಾಜಿ ಸಚಿವ ಆಂಜನಮೂರ್ತಿ ತಿಳಿಸಿದರು.

ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗ ಕರ್ನಾಟಕ ರಾಜ್ಯ ದಲಿತ ಕೂಲಿ ಕಾರ್ಮಿಕರ ಸಂಘಟನೆ ಏರ್ಪಡಿಸಿದ್ದ 6ನೇ ವರ್ಷದ ಗ್ರಾಮಾಂತರ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ಡಾ.ಆಂಬೇಡ್ಕರ್ ಅವರ 56ನೇ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಸಂಘಟನೆಯ ರಾಜ್ಯ ಅಧ್ಯಕ್ಷ ಬಿ.ಎಂ.ಗಂಗಬೈಲಪ್ಪ, ಇಂದಿನ ಸಾಮಾಜಿಕ ಬದುಕಿಗೆ ಶಿಕ್ಷಣ ಅಗತ್ಯವಾಗಿದ್ದು, ಆರ್ಥಿಕವಾಗಿ ಹಿಂದುಳಿದವರ ಶಿಕ್ಷಣಕ್ಕೆ ಅಗತ್ಯವಾದ ಸೌಲಭ್ಯಗಳನ್ನು ಕಲ್ಪಿಸಿ ಪ್ರೋತ್ಸಾಹಿಸುತ್ತಿದ್ದೇವೆ' ಎಂದು ಹೇಳಿದರು.

ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ಭಾಗದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ 150 ವಿದ್ಯಾರ್ಥಿಗಳನ್ನು ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ಪಿ.ಚೆಲುವರಾಜು ಪುರಸ್ಕರಿಸಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ರಾಜ್ಯ ಪ್ರಶಸ್ತಿ ಪುರಸ್ಕೃತ ಎಂ.ವಿ.ವೆಂಕಟಶ್ಯಾಮಯ್ಯ, ಪ್ರಸೂತಿ ತಜ್ಞೆ ಡಾ.ನಾಗರತ್ನಮ್ಮ, ಮೊಹಮ್ಮದ್ ಖಾನ್, ಪ್ರಭಾಕರ್, ಎಂ.ಶ್ರೀನಿವಾಸ್ ಅವರನ್ನು ಸನ್ಮಾನಿಸಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಾ ನಾಯಕ್, ಕರವೇ ಅಧ್ಯಕ್ಷ ಉಮೇಶ್‌ಗೌಡ, ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ವರದನಾಯಕನಹಳ್ಳಿ ನಾಗರಾಜು, ಸಂಘಟನೆಯ ಉಪಾಧ್ಯಕ್ಷ ಎಸ್.ಮಂಜುನಾಥಯ್ಯ ಹಾಜರಿದ್ದರು.

ಪ್ರಧಾನ ಕಾರ್ಯದರ್ಶಿ ಸಿ.ಗಂಗರಾಜು ಸ್ವಾಗತಿಸಿದರು. ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟರಾಜು ನಿರೂಪಿಸಿದರು. ದಾಸರಹಳ್ಳಿ ಘಟಕದ ಅಧ್ಯಕ್ಷ ಎನ್.ಕೆ.ಆಚಾರ್ಯ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.