ADVERTISEMENT

ಪ್ರತ್ಯೇಕ ಪ್ರಕರಣ-ಮೂವರ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2011, 18:40 IST
Last Updated 9 ಫೆಬ್ರುವರಿ 2011, 18:40 IST

ಬೆಂಗಳೂರು: ಕಾಮಾಕ್ಷಿಪಾಳ್ಯ, ಜಗಜೀವನರಾಂನಗರ ಮತ್ತು ಕುಮಾರಸ್ವಾಮಿ ಲೇಔಟ್ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದ 48 ಗಂಟೆಗಳಲ್ಲಿ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪತಿ ದೈಹಿಕ ಕಿರುಕುಳ ನೀಡುತ್ತಿದ್ದರಿಂದ ಮನನೊಂದ ನವವಿವಾಹಿತೆಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಗಜೀವನರಾಂನಗರ ಸಮೀಪದ ಹಳೆಗುಡ್ಡದಹಳ್ಳಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ತಬ್ರೇಜ್ ಎಂಬಾತನ ಪತ್ನಿ ಯಾಸ್ಮಿನ್ (22) ಆತ್ಮಹತ್ಯೆ ಮಾಡಿಕೊಂಡವರು. ಐದು ತಿಂಗಳ ಹಿಂದೆಯಷ್ಟೇ ಅವರ ವಿವಾಹವಾಗಿತ್ತು.

ಆತ ಪತ್ನಿಗೆ ಹೊಡೆದು ದೌರ್ಜನ್ಯ ನಡೆಸುತ್ತಿದ್ದ. ಅಲ್ಲದೇ ಮೂರ್ನಾಲ್ಕು ಬಾರಿ ಯಾಸ್ಮಿನ್ ಅವರನ್ನು ತವರು ಮನೆಗೆ ಕಳುಹಿಸಿದ್ದ. ರಾತ್ರಿಯೂ ಆತ ಪತ್ನಿಯ ಜತೆ ಜಗಳವಾಡಿ ಹಲ್ಲೆ ನಡೆಸಿದ. ಇದರಿಂದ ಮನನೊಂದ ಯಾಸ್ಮಿನ್ ನೇಣು ಹಾಕಿಕೊಂಡಿದ್ದಾರೆ ಎಂದು ಜಗಜೀವನರಾಂನಗರ ಪೊಲೀಸರು ತಿಳಿಸಿದ್ದಾರೆ.

‘ಅಳಿಯ ಕಿರುಕುಳ ನೀಡುತ್ತಿದ್ದ ಕಾರಣದಿಂದಲೇ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ’ ಎಂದು ಯಾಸ್ಮಿನ್ ತಾಯಿ ಫರೀದಾ ದೂರು ಕೊಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತಬ್ರೇಜ್‌ನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮತ್ತೊಂದು ಘಟನೆ: ಕಾಮಾಕ್ಷಿಪಾಳ್ಯದ ಮೀನಾಕ್ಷಿನಗರ ನಿವಾಸಿ ಶಶಿಕಲಾ (26) ಎಂಬುವರು ಪತಿಯ ಕಿರುಕುಳ ತಾಳಲಾರದೆ ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೊದಲ ಪತ್ನಿಯಿಂದ ವಿಚ್ಛೇದನ ಪಡೆದಿದ್ದ ಶಿವಕಾಂತ್ ಎಂಬಾತ ಶಶಿಕಲಾ ಅವರನ್ನು ವಿವಾಹವಾಗಿದ್ದ. ಆತ ಪತ್ನಿಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದ. ಇದರಿಂದ ಮನನೊಂದ ಅವರು ಮನೆಯಲ್ಲೇ ನೇಣು ಹಾಕಿಕೊಂಡಿದ್ದಾರೆ ಎಂದು ಕಾಮಾಕ್ಷಿಪಾಳ್ಯ ಪೊಲೀಸರು ತಿಳಿಸಿದ್ದಾರೆ.

‘ಶಶಿಕಲಾ ಆತ್ಮಹತ್ಯೆ ಮಾಡಿಕೊಂಡಿಲ್ಲ. ಶಿವಕಾಂತ್ ಆಕೆಯನ್ನು ಕೊಲೆ ಮಾಡಿದ್ದಾನೆ’ ಎಂದು ಪೋಷಕರು ಮತ್ತು ಸಂಬಂಧಿಕರು ಆರೋಪಿಸಿದ್ದಾರೆ. ಇದನ್ನು ನಿರಾಕರಿಸಿರುವ ಪೊಲೀಸರು ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿನ ಕಾರಣ ಗೊತ್ತಾಗಲಿದೆ ಎಂದು ಹೇಳಿದ್ದಾರೆ.

ಆತ್ಮಹತ್ಯೆಗೆ ಪ್ರೇರಣೆ ನೀಡಿದ (ಭಾರತೀಯ ದಂಡ ಸಂಹಿತೆ 306) ಆರೋಪದ ಮೇಲೆ ಶಿವಕಾಂತ್‌ನನ್ನು ಬಂಧಿಸಲಾಗಿದೆ. ಕೊಲೆಯಾಗಿರುವುದು ಸಾಬೀತಾದರೆ ಕೊಲೆ ಪ್ರಕರಣ ದಾಖಲಿಸಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕುಮಾರಸ್ವಾಮಿ ಲೇಔಟ್: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅಶ್ರಫ್ (45) ಎಂಬುವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಮಾರಸ್ವಾಮಿ ಲೇಔಟ್ ಸಮೀಪದ ಇಲಿಯಾಜ್ ನಗರದಲ್ಲಿ ಮಂಗಳವಾರ ನಡೆದಿದೆ.

ಮುಬೀನಾ ಎಂಬುವರನ್ನು ವಿವಾಹವಾಗಿದ್ದ ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಸೌದೆ ಡಿಪೊದಲ್ಲಿ ಕೆಲಸ ಮಾಡುತ್ತಿದ್ದ ಅಶ್ರಫ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಎರಡು ತಿಂಗಳ ಹಿಂದೆ ಅವರು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಆ ಸಂದರ್ಭದಲ್ಲಿ ಕುಟುಂಬ ಸದಸ್ಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ಮುಬೀನಾ ಅವರು ಮಕ್ಕಳೊಂದಿಗೆ ತವರು ಮನೆಗೆ ಹೋಗಿದ್ದರು. ಮನೆಯಲ್ಲಿ ಒಬ್ಬರೇ ಇದ್ದ ಅಶ್ರಫ್ ಮಧ್ಯಾಹ್ನ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.