ADVERTISEMENT

ಪ್ರತ್ಯೇಕ ಪ್ರಕರಣ: ಯುವಕರ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2012, 20:00 IST
Last Updated 3 ಫೆಬ್ರುವರಿ 2012, 20:00 IST

ಬೆಂಗಳೂರು: ನಗರದ ಮಡಿವಾಳ ಮತ್ತು ಎಲೆಕ್ಟ್ರಾನಿಕ್‌ಸಿಟಿ ಠಾಣೆಯಲ್ಲಿ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಯುವಕರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಮಿಳುನಾಡು ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕ ಆಡುಗೋಡಿ ಸಮೀಪದ ಬೃಂದಾವನ ಲೇಔಟ್‌ನಲ್ಲಿ ಗುರುವಾರ ಸಂಜೆ ನಡೆದಿದೆ.

ಸತೀಶ್‌ಕುಮಾರ್ (25) ಆತ್ಮಹತ್ಯೆ ಮಾಡಿಕೊಂಡವರು. ಜಯನಗರದ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅವರು ಸ್ನೇಹಿತರ ಜತೆ ಬೃಂದಾವನ ಲೇಔಟ್‌ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಸ್ನೇಹಿತರೆಲ್ಲ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಅವರು ಮನೆಯಲ್ಲೇ ನೇಣು ಹಾಕಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಮಡಿವಾಳ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಮತ್ತೊಂದು ಪ್ರಕರಣ: ತ್ರಿಪುರಾ ಮೂಲದ ಉತ್ತಮ್ಮ ಮಲ್ಲ ಬರ್ಮನ್ (27) ಎಂಬುವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರು ಬೇಗೂರು- ಕೊಪ್ಪ ರಸ್ತೆಯಲ್ಲಿರುವ ಕಟ್ಟಡ ನಿರ್ಮಾಣ ಸಂಸ್ಥೆಯೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿದ್ದರು. ಆ ಸಂಸ್ಥೆಯ ಸಮೀಪದ ಮಾವಿನ ತೋಪಿನಲ್ಲಿನ ಮರವೊಂದಕ್ಕೆ ಅವರು ನೇಣು ಹಾಕಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಎಲೆಕ್ಟ್ರಾನಿಕ್‌ಸಿಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರಗಳವು: ದುಷ್ಕರ್ಮಿಗಳು ಮಹಿಳೆಯ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಬಸವನಗುಡಿಯ ಎಚ್.ಬಿ.ಸಮಾಜ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಬಸವನಗುಡಿ ರಾಘವೇಂದ್ರಸ್ವಾಮಿ ದೇವಸ್ಥಾನ ರಸ್ತೆ ನಿವಾಸಿ ವೇದಾವತಿ (60) ಸರ ಕಳೆದುಕೊಂಡವರು. ಅವರು ಬೆಳಿಗ್ಗೆ ಎಂಟು ಗಂಟೆ ಸುಮಾರಿಗೆ ದೇವಸ್ಥಾನಕ್ಕೆ ನಡೆದು ಹೋಗುತ್ತಿದ್ದಾಗ ಇಬ್ಬರು ದುಷ್ಕರ್ಮಿಗಳು ಬೈಕ್‌ನಲ್ಲಿ ಹಿಂಬಾಲಿಸಿ ಬಂದು ಈ ಕೃತ್ಯ ಎಸಗಿದ್ದಾರೆ, ಸರದ ಮೌಲ್ಯ ಸುಮಾರು 1.25 ಲಕ್ಷ ರೂಪಾಯಿ ಎಂದು ಪೊಲೀಸರು ಹೇಳಿದ್ದಾರೆ. ಬಸವನಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT