ADVERTISEMENT

ಪ್ರತ್ಯೇಕ ಬಜೆಟ್‌ಗೆ ಆಗ್ರಹಿಸಿ ರ್ಯಾಲಿ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2011, 19:40 IST
Last Updated 15 ಫೆಬ್ರುವರಿ 2011, 19:40 IST

ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಸರ್ಕಾರಗಳು 2011-12ರ ಬಜೆಟ್‌ನಲ್ಲಿ ಪರಿಶಿಷ್ಟ ಜನಾಂಗದವರ ಅಭಿವೃದ್ಧಿಗೆ ಪ್ರತ್ಯೇಕ ಬಜೆಟ್ ಮಂಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ಮಂಗಳವಾರ ನಗರದ ಪುರಭವನದಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ತಮಟೆ ಚಳವಳಿ ಮೂಲಕ ಪ್ರತಿಭಟನಾ ರ್ಯಾಲಿ ನಡೆಸಿದರು.

ದಲಿತರ ಸಬಲೀಕರಣಕ್ಕಾಗಿ ಬಜೆಟ್‌ನಲ್ಲಿ ಶೇ 25ರಷ್ಟು ಅನುದಾನವನ್ನು ಮೀಸಲಿಟ್ಟು, ಪ್ರತ್ಯೇಕ ಬಜೆಟ್ ಮಂಡಿಸಬೇಕು. ಪರಿಶಿಷ್ಟರ ಅಭಿವೃದ್ಧಿಗೆ ಏಕಗವಾಕ್ಷಿ ಯೋಜನೆಯನ್ನು ಜಾರಿಗೊಳಿಸಬೇಕು. ಪರಿಶಿಷ್ಟರಲ್ಲಿ ಹಿಂದುಳಿದ ಜನಾಂಗಕ್ಕೆ ಒಳ ಮೀಸಲಾತಿ ಕಲ್ಪಿಸಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.

ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ಜನಾಂಗದವರು ಪಡೆದಿರುವ 306 ಕೋಟಿ ರೂಪಾಯಿ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು. ಪ್ರಸ್ತುತ ಸನ್ನಿವೇಶದ ಜೀವನಕ್ಕನುಗುಣವಾಗಿ ವಿದ್ಯಾರ್ಥಿ ವೇತನವನ್ನು ಹೆಚ್ಚಿಸಬೇಕು. ದಲಿತರು ಮತ್ತು ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಲು ವಿಶೇಷ ಕಾನೂನು ರೂಪಿಸಬೇಕು ಎಂದು ಅವರು ಆಗ್ರಹಿಸಿದರು.

ನಿವೃತ್ತ ನ್ಯಾಯಮೂರ್ತಿ ಸೋಮಶೇಖರ್ ಆಯೋಗದ ವರದಿ ತಿರಸ್ಕರಿಸಿ ಚರ್ಚ್‌ಗಳ ಮೇಲಿನ ದಾಳಿಯನ್ನು ಸಿಬಿಐ ತನಿಖೆಗೆ ವಹಿಸಬೇಕು. ಬಹುರಾಷ್ಟ್ರೀಯ ಕಂಪೆನಿಗಳಲ್ಲಿ ಶೇ 25ರಷ್ಟು ಉದ್ಯೋಗಗಳನ್ನು ಮೀಸಲಿಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಎನ್.ಮೂರ್ತಿ, ಪ್ರಧಾನ ಕಾರ್ಯದರ್ಶಿ ಸಿ.ಎಸ್.ರಘು, ಜಿಲ್ಲಾ ಘಟಕದ ಅಧ್ಯಕ್ಷ ಜಿ.ಸುಬ್ರಮಣಿ, ಉತ್ತರ ತಾಲ್ಲೂಕ್ ಅಧ್ಯಕ್ಷ ಶಂಕರ ಬಾಬು, ವಿಭಾಗೀಯ ಪ್ರಧಾನ ಕಾರ್ಯದರ್ಶಿ ಜೆ.ಚಂದ್ರಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.