ADVERTISEMENT

ಬಿಜೆಪಿಗೇ ಬಹುಮತ: ಶೆಟ್ಟರ್

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2013, 19:35 IST
Last Updated 13 ಏಪ್ರಿಲ್ 2013, 19:35 IST

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಪಕ್ಷ ತೊರೆದಿರುವುದರಿಂದ ಚುನಾವಣೆಯಲ್ಲಿ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಈ ಬಾರಿ 120ರಿಂದ 135 ಸ್ಥಾನಗಳನ್ನು ಪಡೆಯುವ ಮೂಲಕ ಪಕ್ಷ ಸ್ಪಷ್ಟ ಬಹುಮತ ಗಳಿಸಲಿದೆ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಶನಿವಾರ ಇಲ್ಲಿ ತಿಳಿಸಿದರು.

`ಒಬ್ಬ ವ್ಯಕ್ತಿಯಿಂದ ಬಿಜೆಪಿ ಬೆಳೆದಿಲ್ಲ, ತತ್ವ-ಸಿದ್ಧಾಂತ, ಸಂಘಟನೆ ಆಧಾರದ ಮೇಲೆ ಹಂತ ಹಂತವಾಗಿ ಬೆಳೆದುಬಂದಿದೆ.

ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದು, ಪಕ್ಷದಿಂದಲೇ ಹೊರತು, ವ್ಯಕ್ತಿಗತವಾಗಿ ಅಲ್ಲ. ಹೀಗಾಗಿ ಸರ್ಕಾರದ ಐದು ವರ್ಷಗಳ ಸಾಧನೆಗಳ ಶ್ರೇಯಸ್ಸು ಬಿಜೆಪಿಗೆ ಸಲ್ಲುತ್ತದೆ' ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

`ಎರಡು ವರ್ಷಗಳಿಂದ ಮುಖ್ಯಮಂತ್ರಿಗಳ ಮೇಲೆ ಭ್ರಷ್ಟಾಚಾರದ ಆರೋಪಗಳಿಲ್ಲ. ಉತ್ತಮವಾದ ಆಡಳಿತ ನೀಡಿದ್ದೇವೆ. ಆಡಳಿತದಲ್ಲಿ ಆಗಿರುವ ಬದಲಾವಣೆಯನ್ನು ಜನತೆ ಗಮನಿಸಿದ್ದಾರೆ. ಸ್ಥಿರ ಸರ್ಕಾರ ಬಯಸಿರುವ ಜನತೆ ಬಿಜೆಪಿಗೆ ಸ್ಪಷ್ಟ ಬಹುಮತ ನೀಡಲಿದ್ದಾರೆ' ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್‌ಸಿಂಗ್, ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಪಕ್ಷದ ಪರವಾಗಿ ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ.

ಜೇಟ್ಲಿ ಅವರು ಚುನಾವಣಾ ಕಾರ್ಯತಂತ್ರಗಳನ್ನು ರೂಪಿಸುತ್ತಿದ್ದಾರೆ. ಇದೇ 17ರ ನಂತರ ಹಿರಿಯ ನಾಯಕರು ಬೇರೆ ಬೇರೆ ತಂಡಗಳಲ್ಲಿ ಪ್ರವಾಸ ಮಾಡಲಿದ್ದಾರೆ ಎಂದರು.

ಮನೆ ಮನೆ ಪ್ರಚಾರ: 126 ಕ್ಷೇತ್ರಗಳಲ್ಲಿ ಈಗಾಗಲೇ ಮನೆ ಮನೆ ಪ್ರಚಾರ ಶುರುವಾಗಿದೆ. ಸಮೀಕ್ಷೆಗಳನ್ನು ಆಧರಿಸಿ ಹಿರಿಯ ನಾಯಕ ಅರುಣ್ ಜೇಟ್ಲಿ ಅವರು ಸೂಕ್ತ ಸಲಹೆ ಸೂಚನೆಗಳನ್ನು ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ತಿಳಿಸಿದರು.3

ಇಂದು ಜೇಟ್ಲಿ ನಗರಕ್ಕೆ
ಬಿಜೆಪಿಯ ರಾಜ್ಯ ಉಸ್ತುವಾರಿ ಅರುಣ್ ಜೇಟ್ಲಿ ಅವರು ಭಾನುವಾರ ನಗರಕ್ಕೆ ಭೇಟಿ ನೀಡಲಿದ್ದು, ಅಭ್ಯರ್ಥಿಗಳ ಆಯ್ಕೆ ಸಂಬಂಧ ರಾಜ್ಯ ಘಟಕದ ಮುಖಂಡರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಬಾಕಿ ಇರುವ 48 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ, ಚುನಾವಣಾ ಕಾರ್ಯತಂತ್ರ, ಪ್ರಣಾಳಿಕೆಗೆ ಅಂತಿಮ ರೂಪ ನೀಡುವುದು ಇತ್ಯಾದಿ ಅಂಶಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಸೋಮವಾರ ಅವರು ದೆಹಲಿಗೆ ತೆರಳಲಿದ್ದು, ಅಂದು ಸಂಜೆ ಪಟ್ಟಿ ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಇದೇ 18ರಂದು ಮತ್ತೆ ನಗರಕ್ಕೆ ಬರುವ ಜೇಟ್ಲಿ ನಾಲ್ಕು ದಿನ ಇಲ್ಲಿಯೇ ಇದ್ದು, ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಸೂಕ್ತ ಸಲಹೆ - ಸೂಚನೆಗಳನ್ನು ನೀಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT