ADVERTISEMENT

ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2010, 10:20 IST
Last Updated 21 ಡಿಸೆಂಬರ್ 2010, 10:20 IST

ಬೆಂಗಳೂರು:ಹಿಂದೂ ಪರ ಸಂಘಟನೆಗಳ ಬಗ್ಗೆ ಹೇಳಿಕೆ ನೀಡುವ ಮೂಲಕ ವಿವಾದದಲ್ಲಿ ಸಿಲುಕಿರುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಹುಲ್‌ಗಾಂಧಿ ಅವರ ವಿರುದ್ಧ ಬಿಜೆಪಿ ಯುವ ಮೋರ್ಚಾ ಬೆಂಗಳೂರು ನಗರ ಘಟಕದ ಸದಸ್ಯರು ಎಂ.ಜಿ.ರಸ್ತೆಯ ಮಹಾತ್ಮಗಾಂಧಿ ಪ್ರತಿಮೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

‘ಆರ್‌ಎಸ್‌ಎಸ್ ಮತ್ತಿತರ ಹಿಂದೂ ಪರ ಸಂಘಟನೆಗಳನ್ನು ಭಯೋತ್ಪಾದನಾ ಸಂಘಟನೆಗಳಿಗೆ ಹೋಲಿಸಿರುವ ರಾಹುಲ್‌ಗಾಂಧಿಗೆ ಲೋಕ ಜ್ಞಾನವಿಲ್ಲ’ ಎಂದು ದೂರಿದ ಪ್ರತಿಭಟನಾಕಾರರು ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ಎಲ್.ಎ.ರವಿಸುಬ್ರಹ್ಮಣ್ಯ ‘ಕೇಂದ್ರ ಸರ್ಕಾರದ ವಿರುದ್ಧ ಕೇಳಿ ಬಂದಿರುವ ಹಲವು ಹಗರಣಗಳನ್ನು ಮುಚ್ಚಿ ಹಾಕುವ ಸಲುವಾಗಿ ಕಾಂಗ್ರೆಸ್ ನಾಯಕರು ಮನಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಭಯೋತ್ಪಾದನಾ ಚಟುವಟಿಕೆಗಳಲ್ಲಿ ಹಿಂದೂ ಪರ ಸಂಘಟನೆಗಳ ಕೈವಾಡವಿರುವ ಬಗ್ಗೆ ಆರೋಪಗಳು ಕೇಳಿ ಬಂದಿವೆಯಷ್ಟೇ. ಆದರೆ ಆ ಆರೋಪಗಳು ಈವರೆಗೂ ಸಾಬೀತಾಗಿಲ್ಲ’ ಎಂದರು.

‘ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಸಂಘಟನೆಯನ್ನು ಭಯೋತ್ಪಾದನಾ ಸಂಘಟನೆ ಎಂದು ಬಹುತೇಕ ರಾಷ್ಟ್ರಗಳು ಒಪ್ಪಿಕೊಂಡಿವೆ. ಹಿಂದೂ ಮೂಲಭೂತವಾದಿಗಳನ್ನು ಅಂತಹ ಎಲ್‌ಇಟಿ ಸಂಘಟನೆಗೆ ಹೋಲಿಸಿರುವ ಕಾಂಗ್ರೆಸ್ ನಾಯಕರು ಜನರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ’ ಎಂದು ಅವರು ಆರೋಪಿಸಿದರು.

ಘಟಕದ ಅಧ್ಯಕ್ಷ ಹರೀಶ್, ಪ್ರಧಾನ ಕಾರ್ಯದರ್ಶಿ ಕೆ.ಗಣೇಶ್, ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಬಿ.ಎಸ್.ಸತ್ಯನಾರಾಯಣ, ತೆರಿಗೆ ಮತ್ತು ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷ ಪಿ.ಎನ್.ಸದಾಶಿವ   ಸೇರಿದಂತೆ ಪಾಲಿಕೆಯ ಹಲವು ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.