ADVERTISEMENT

ಬೆಂಗಳೂರು ಕಸದ ತೊಟ್ಟಿ- ಟೀಕೆ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2012, 19:30 IST
Last Updated 19 ಅಕ್ಟೋಬರ್ 2012, 19:30 IST

ಬೆಂಗಳೂರು: ಬೆಂಗಳೂರು ನಗರ ಕಸದ ತೊಟ್ಟಿಯಾಗಿ ಮಾರ್ಪಟ್ಟಿದೆ. ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆಯನ್ನು ನಿರ್ವಹಿಸುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಟೀಕಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮಹಾನಗರ ಪಾಲಿಕೆ ಇದ್ದೂ ಇಲ್ಲದಂತಾಗಿದೆ ಎಂದರು.

ಬಿಬಿಎಂಪಿ ವಿರುದ್ಧ ನಗರದಲ್ಲಿ ಸಾಕಷ್ಟು ಪ್ರತಿಭಟನೆಗಳು ನಡೆದವು. ಇನ್ನು ಮುಂದೆ ಕಸದ ಸಮಸ್ಯೆಯನ್ನು ಸಮರ್ಪಕವಾಗಿ ನಿರ್ವಹಿಸಲಾಗುವುದು ಎಂದು ಸರ್ಕಾರ ಜನತೆಗೆ ಆಶ್ವಾಸನೆ ನೀಡಿತ್ತು. ಅಲ್ಲದೇ, ಒಂದು ತಿಂಗಳಲ್ಲಿಯೇ ಕಸದ ಸಮಸ್ಯೆಗೆ ಕೊನೆ ಹಾಡಲಾಗುವುದು ಎಂದು ಮಂಡೂರು, ಮಾವಳ್ಳಿಪುರದ ಜನರಿಗೆ ಭರವಸೆ ಕೊಟ್ಟಿತ್ತು. ಈ ಅವಧಿ ಮುಗಿದರೂ ಬಿಬಿಎಂಪಿ ಕ್ರಮ ಕೈಗೊಂಡಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಬಿಬಿಎಂಪಿಯಲ್ಲಿ ಹಣದ ಕೊರತೆ ಇದೆ. ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿಗೆ ಯಾವುದೇ ವಿಶೇಷ ಪ್ಯಾಕೇಜ್ ಕೂಡ ನೀಡಿಲ್ಲ. ಪೌರ ಕಾರ್ಮಿಕರಿಗೆ ಮೂರು ತಿಂಗಳಿಂದ ವೇತನ ನೀಡಿಲ್ಲ. ಗುತ್ತಿಗೆದಾರರಿಗೆ ನೀಡಬೇಕಿರುವ 3,000 ಕೋಟಿ ರೂಪಾಯಿ ಬಾಕಿ ಇದೆ ಎಂದರು.

ನಗರದಲ್ಲಿ ನೀರಿನ ಸಮಸ್ಯೆ ಹೆಚ್ಚುತ್ತಿದೆ. ಇಲ್ಲಿಯವರೆಗೂ 190 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಇಂತಹ ಜ್ವಲಂತ ಸಮಸ್ಯೆಗಳ ಬಗ್ಗೆ ತಲೆ ಕೆಡಿಸಿಕೊಳ್ಳದ ರಾಜ್ಯ ಸರ್ಕಾರ ಒಳ ಜಗಳದಲ್ಲಿಯೇ ಕಾಲ ಕಳೆಯುತ್ತಿದೆ ಎಂದು ಆರೋಪಿಸಿದರು.

ಇದೆಲ್ಲದರ ಬಗ್ಗೆ ಈ ಹಿಂದೆಯೇ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದರು. ಕಸ ವಿಲೇವಾರಿ ಸೇರಿದಂತೆ ಇತರ ಸಮಸ್ಯೆಗಳನ್ನು ಶೀಘ್ರದಲ್ಲಿಯೇ ಬಗೆಹರಿಸಲಾಗುವುದು ಎಂದು ಅವರು ಭರವಸೆ ನೀಡಿದ್ದರು. ಆದರೆ ಇಲ್ಲಿಯವರೆಗೂ ಯಾವುದೇ ಸುಧಾರಣೆ ಕಂಡು ಬಂದಿಲ್ಲ ಎಂದು ಅವರು ದೂರಿದರು.

ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ ಸೂಕ್ತ ರೀತಿಯಲ್ಲಿ ಕಸ ವಿಲೇವಾರಿ ಮಾಡಬೇಕು. ಇದೇ ಪರಿಸ್ಥಿತಿ ಮುಂದುವರಿದರೆ  ಸರ್ಕಾರದ ಬೇಜವಾಬ್ದಾರಿ ವರ್ತನೆಯ ವಿರುದ್ಧ ಕಾಂಗ್ರೆಸ್ ಪಕ್ಷ ಶೀಘ್ರದಲ್ಲಿಯೇ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಿದೆ ಎಂದು ಅವರು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.