ADVERTISEMENT

ಬೆಲೆ ಕುಸಿತ: ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2011, 19:30 IST
Last Updated 17 ಜೂನ್ 2011, 19:30 IST

ಬೆಂಗಳೂರು: ಭತ್ತ ಮತ್ತು ರೇಷ್ಮೆ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.ನಗರ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ರ‌್ಯಾಲಿ ನಡೆಸಿದ ಪ್ರತಿಭಟನಾಕಾರರು ಬೆಲೆ ಕುಸಿತದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಭತ್ತ ಮತ್ತು ರೇಷ್ಮೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

`ಮುಕ್ತ ಮಾರುಕಟ್ಟೆ ವ್ಯವಸ್ಥೆ ಮತ್ತು ಸುಂಕರಹಿತ ರೇಷ್ಮೆ ಆಮದು ನೀತಿಯಿಂದಾಗಿ ರೇಷ್ಮೆ ಹಾಗೂ ಭತ್ತ ಬೆಳೆಗಾರರು ತೊಂದರೆ ಅನುಭವಿಸುವಂತಾಗಿದೆ. ಬಂಡವಾಳ ಶಾಹಿಗಳ ಹಿತರಕ್ಷಣೆಗಾಗಿ ಕೇಂದ್ರ ಸರ್ಕಾರ ರೈತರನ್ನು ಶೋಷಿಸುತ್ತಿದೆ.

ಸರ್ಕಾರದ ರೈತ ವಿರೋಧಿ ನೀತಿಯಿಂದಾಗಿ ಕೃಷಿಕರು ಹಾಗೂ ಅವರ ಕುಟುಂಬ ಸದಸ್ಯರು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ~ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೆ.ಎಸ್.ಪುಟ್ಟಣ್ಣಯ್ಯ ದೂರಿದರು.

`ಭತ್ತ ಹಾಗೂ ರೇಷ್ಮೆ ಗೂಡಿನ ಬೆಲೆ ಕುಸಿತಕ್ಕೆ ಕೇಂದ್ರ ಸರ್ಕಾರ ಕಾರಣ ಎಂದು ರಾಜ್ಯ ಸರ್ಕಾರ ಕೈ ಚೆಲ್ಲಿ ಕುಳಿತಕೊಳ್ಳಬಾರದು. ತನ್ನ ವ್ಯಾಪ್ತಿಯಲ್ಲಿ ಸಾಧ್ಯವಿರುವ ಕ್ರಮ ಕೈಗೊಂಡು ರೈತರ ಸಮಸ್ಯೆಗಳನ್ನು ಪರಿಹರಿಸಬೇಕು. ರೈತ ಮುಖಂಡರು ಹಾಗೂ ಸಚಿವರ ನಿಯೋಗವನ್ನು ದೆಹಲಿಗೆ ಕರೆದೊಯ್ದು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು~ ಎಂದು ಅವರು ಹೇಳಿದರು.

ಸುಂಕರಹಿತ ರೇಷ್ಮೆ ಆಮದು ನೀತಿಯನ್ನು ಕೈಬಿಡಬೇಕು. ರೇಷ್ಮೆ ಆಮದು ಸುಂಕವನ್ನು ಶೇ 35ಕ್ಕೆ ಹೆಚ್ಚಿಸಬೇಕು. ರೇಷ್ಮೆಗೂಡಿನ ದರ ನಿಗದಿಗೆ ವೈಜ್ಞಾನಿಕ ಮಾನದಂಡ ಅನುಸರಿಸಬೇಕು. ಭತ್ತಕ್ಕೆ ಬೆಂಬಲ ಬೆಲೆ ಘೋಷಿಸಬೇಕು. ಭತ್ತ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು. ರಾಜ್ಯದ ಶಾಲೆಗಳ ಬಿಸಿಯೂಟ ಯೋಜನೆಗೆ ಹೊರ ರಾಜ್ಯಗಳಿಂದ ಅಕ್ಕಿಯನ್ನು ಆಮದು ಮಾಡಿಕೊಳ್ಳಬಾರದು. ಭತ್ತ ಬೆಳೆಯುವ ಎಲ್ಲ ರೈತರಿಗೂ ಸಹಾಯಧನ ನೀಡಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.

ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಜೂನ್ 24ರೊಳಗೆ ಕ್ರಮ ಕೈಗೊಳ್ಳದಿದ್ದರೆ ವಿವಿಧ ಜಿಲ್ಲೆಗಳ ಒಂದು ಲಕ್ಷಕ್ಕೂ ಹೆಚ್ಚು ರೈತರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

ಪ್ರತಿಭಟನಾಕಾರರನ್ನು ಭೇಟಿ ಮಾಡಿ ಮಾತನಾಡಿದ ಸಚಿವ ವಿ.ಸೋಮಣ್ಣ ಅವರು, `ರೇಷ್ಮೆ ಮತ್ತು ಭತ್ತ ಬೆಳೆಗಾರರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಅವರ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ಸದ್ಯದಲ್ಲೇ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತದೆ~ ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.