ADVERTISEMENT

ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 2 ಜನವರಿ 2012, 19:30 IST
Last Updated 2 ಜನವರಿ 2012, 19:30 IST

ಬೆಂಗಳೂರು: ರಾಜ್ಯದ ಜನತೆಗೆ ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಸಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುವಂತೆ ಇಂಧನ ಸಚಿವೆ ಶೋಭಾ ಕರಂದ್ಲಾಜೆ ಅವರು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕರ್ನಾಟಕ ವಿದ್ಯುತ್ ಮಂಡಳಿ ಎಂಜಿನಿಯರುಗಳ ಸಂಘದ ತಾಂತ್ರಿಕ ದಿನಚರಿ-2012 ಬಿಡುಗಡೆ ಮಾಡಿ ಮಾತನಾಡಿದ ಅವರು, ಬೇಸಿಗೆಯಲ್ಲಿ ಉಂಟಾಗಬಹುದಾದ ಎಲ್ಲ ರೀತಿಯ ತೊಡಕುಗಳನ್ನು ನಿವಾರಿಸಿಕೊಳ್ಳಲು ಈಗಿನಿಂದಲೇ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.

ರಾಜ್ಯದ ಜಲಾಶಯಗಳಲ್ಲಿ 2012ರ ಜೂನ್ 31ರವರೆಗೆ ಪ್ರತಿನಿತ್ಯ 45 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದಿಸುವಷ್ಟು ನೀರಿನ ಸಂಗ್ರಹವಿದೆ. ಪ್ರಸ್ತುತ ಆರ್‌ಟಿಪಿಎಸ್‌ನಲ್ಲೂ 145 ಮೆಗಾವಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ.

ಕೆಲ ದಿನಗಳ ಕಾಲ ಆರ್‌ಟಿಪಿಎಸ್‌ನ ಒಂದೆರಡು ಘಟಕಗಳನ್ನು ಸ್ಥಗಿತಗೊಳಿಸಿ ಬೇಸಿಗೆಗೆ ಅಗತ್ಯವಿರುವ ಕಲ್ಲಿದ್ದಲು ಸಂಗ್ರಹಿಸಲಾಗುವುದು. ಇದರ ಜತೆಗೆ, ಸಕ್ಕರೆ ಕಾರ್ಖಾನೆಗಳಿಂದ 430 ಮೆಗಾವಾಟ್ ವಿದ್ಯುತ್ ಖರೀದಿಸಲು ಒಪ್ಪಂದ ಮಾಡಿಕೊಳ್ಳುವ ಸಂಬಂಧ ಚರ್ಚೆ ನಡೆದಿದೆ ಎಂದರು.

ಕೇಂದ್ರ ಇಂಧನ ಸಂಶೋಧನಾ ಸಂಸ್ಥೆಯ ಪ್ರಧಾನ ನಿರ್ದೇಶಕ ಎನ್. ಮುರುಗೇಶನ್ ಮಾತನಾಡಿ, ರಾಜ್ಯದಲ್ಲಿ ಹೊಸ ವಿದ್ಯುತ್ ಉತ್ಪಾದನಾ ಯೋಜನೆಗಳನ್ನು ಹಮ್ಮಿಕೊಳ್ಳುವ ಅಗತ್ಯವಿದ್ದು, ಆ ಮೂಲಕ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯನ್ನು  ಪರಿಹರಿಸಬಹುದಾಗಿದೆ ಎಂದರು.

ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಮೀಮ್‌ಬಾನು, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ರವಿಕುಮಾರ್, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪಿ. ಮಣಿವಣ್ಣನ್, ಕೆಇಬಿ ಎಂಜಿನಿಯರುಗಳ ಸಂಘದ ಅಧ್ಯಕ್ಷ ವೆಂಕಟಶಿವಾರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.