ADVERTISEMENT

ಮದ್ಯಪಾನಕ್ಕೆ ಹಣ ನೀಡದ ತಾಯಿಯ ಕತ್ತು ಕೊಯ್ದು ಕೊಲೆಗೆ ಯತ್ನಿಸಿದ ಮಗ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2012, 19:30 IST
Last Updated 3 ಆಗಸ್ಟ್ 2012, 19:30 IST

ಬೆಂಗಳೂರು: ವ್ಯಕ್ತಿಯೊಬ್ಬ ಮದ್ಯಪಾನ ಮಾಡಲು ಹಣ ನೀಡದ ತಾಯಿಯ ಕತ್ತು ಕೊಯ್ದು ಕೊಲೆ ಮಾಡಲೆತ್ನಿಸಿರುವ ಘಟನೆ ತ್ಯಾಗರಾಜನಗರದಲ್ಲಿ ಗುರುವಾರ ನಸುಕಿನಲ್ಲಿ ನಡೆದಿದೆ.

ತ್ಯಾಗರಾಜನಗರ ಐದನೇ ಅಡ್ಡರಸ್ತೆ ನಿವಾಸಿ ಗಿರೀಶ್ (39) ಎಂಬಾತ ಈ ಕೃತ್ಯ ಎಸಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಆತನ ತಾಯಿ ಪ್ರಭಾವತಿ (65) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜೀವಾವಧಿ ಶಿಕ್ಷೆ: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯನಗರದ ಚೀತನ್ ಸಿ.ಶೆಟ್ಟಿ (23) ಎಂಬಾತನಿಗೆ ನಗರದ 13ನೇ ತ್ವರಿತ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 25 ಸಾವಿರ ರೂಪಾಯಿ ದಂಡ ವಿಧಿಸಿದೆ.

ಮೂಲತಃ ಮಂಗಳೂರಿನ ಚೀತನ್, ಮಲ್ಲೇಶ್ವರ 18ನೇ ಅಡ್ಡರಸ್ತೆ ನಿವಾಸಿ ಸೀತಾರಾಮ್ ಎಂಬುವರ ಮನೆಯಲ್ಲಿ ಕೆಲಸಕ್ಕಿದ್ದ ರಾಧಾ (40) ಎಂಬ ಮಹಿಳೆಯನ್ನು 2008ರ ಸೆ.26ರಂದು ಕೊಲೆ ಮಾಡಿದ್ದ. ಅಲ್ಲದೇ ಸುಮಾರು 2.50 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ಮೊಬೈಲ್ ಮತ್ತು ಹಣವನ್ನು ದೋಚಿಕೊಂಡು ಪರಾರಿಯಾಗಿದ್ದ. ಈ ಸಂಬಂಧ ಮಲ್ಲೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಮಲ್ಲೇಶ್ವರ ಠಾಣೆಯ ಹಿಂದಿನ ಇನ್‌ಸ್ಪೆಕ್ಟರ್ ಎಂ.ಶ್ರೀನಿವಾಸ್ ಮತ್ತು ಸಿಬ್ಬಂದಿ ಚೀತನ್‌ನನ್ನು ಬಂಧಿಸಿ, ಆತನ ವಿರುದ್ಧ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಆತನಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.