ADVERTISEMENT

ಮದ್ಯಪಾನ ಮಾಡಿರಲಿಲ್ಲ: ಆರೋಪಿ ಕೃಷ್ಣಪ್ಪ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 19 ಜುಲೈ 2013, 19:59 IST
Last Updated 19 ಜುಲೈ 2013, 19:59 IST

ಬೆಂಗಳೂರು: ಪರಪ್ಪನ ಅಗ್ರಹಾರ ಬಳಿಯ ಹೊಸ ರೋಡ್ ಜಂಕ್ಷನ್‌ನಲ್ಲಿ ಜುಲೈ 15ರಂದು ಸಂಭವಿಸಿದ್ದ ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತನಾಗಿದ್ದ ಆರೋಪಿ ಕೃಷ್ಣಪ್ಪನನ್ನು ಎಲೆಕ್ಟ್ರಾನಿಕ್‌ಸಿಟಿ ಪೊಲೀಸರು ಶುಕ್ರವಾರ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದು, ಆರೋಪಿಯು ಘಟನೆ ವೇಳೆ ತಾನು ಪಾನಮತ್ತನಾಗಿರಲಿಲ್ಲ ಎಂದು ಪೊಲೀಸರಿಗೆ ಹೇಳಿಕೆ ಕೊಟ್ಟಿದ್ದಾನೆ.

`ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಕೃಷ್ಣಪ್ಪನನ್ನು ನ್ಯಾಯಾಲಯದ ಆದೇಶದಂತೆ ಬೆಳಿಗ್ಗೆ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಲಾಯಿತು. ಆದರೆ, ಆರೋಪಿಯು ಘಟನೆ ವೇಳೆ ತಾನು ಪಾನಮತ್ತನಾಗಿ ವಾಹನ ಚಾಲನೆ ಮಾಡುತ್ತಿರಲಿಲ್ಲ ಎಂದು ಹೇಳಿಕೆ ಕೊಟ್ಟಿದ್ದಾನೆ' ಎಂದು ತನಿಖಾಧಿಕಾರಿಗಳು `ಪ್ರಜಾವಾಣಿ'ಗೆ ತಿಳಿಸಿದರು.

`ಆರೋಪಿಯನ್ನು ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಅಲ್ಲದೇ, ಆತನ ರಕ್ತದ ಮಾದರಿಯನ್ನು ಸಂಗ್ರಹಿಸಿ ಹೆಚ್ಚಿನ ಪರಿಶೀಲನೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸಲಾಗಿದೆ. ಆತ ಘಟನೆ ವೇಳೆ ಪಾನಮತ್ತನಾಗಿ ವಾಹನ ಚಾಲನೆ ಮಾಡುತ್ತಿದ್ದನೆ ಎಂಬುದು ಎಫ್‌ಎಸ್‌ಎಲ್ ತಜ್ಞರು ವರದಿ ನೀಡಿದ ಬಳಿಕವಷ್ಟೇ ಗೊತ್ತಾಗಲಿದೆ' ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

ಆರೋಪಿಯನ್ನು ಸಂಜೆ ಬೆಂಗಳೂರು ಗ್ರಾಮಾಂತರ ಹೆಚ್ಚುವರಿ ಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಆತನನ್ನು ಜು. 29ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದರು. ಬಳಿಕ ಆತನನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.