ಬೆಂಗಳೂರು: ಮನೆಯ ಬಾಗಿಲ ಬೀಗ ಮುರಿದು ಒಳ ನುಗ್ಗಿದ ದುಷ್ಕರ್ಮಿಗಳು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಎಚ್‌ಎಸ್‌ಆರ್ ಲೇಔಟ್ ಎರಡನೇ ಹಂತದ ಪರಂಗಿಪಾಳ್ಯದಲ್ಲಿ ಶನಿವಾರ ರಾತ್ರಿ ನಡೆದಿದೆ.
ಈ ಸಂಬಂಧ ಪರಂಗಿಪಾಳ್ಯ 23ನೇ `ಎ~ ಮುಖ್ಯರಸ್ತೆ ನಿವಾಸಿ ಕಾಕರೆಡ್ಡಿ ಎಂಬುವರು ದೂರು ಕೊಟ್ಟಿದ್ದಾರೆ. ಅವರು ರಾತ್ರಿ ಏಳು ಗಂಟೆ ಸುಮಾರಿಗೆ ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸದಸ್ಯರೊಂದಿಗೆ ಸಂಬಂಧಿಕರ ಮನೆಗೆ ಹೋಗಿದ್ದರು. ಈ ಸಂದರ್ಭದಲ್ಲಿ ಕಿಡಿಗೇಡಿಗಳು ಅವರ ಮನೆಗೆ ನುಗ್ಗಿ ಆಭರಣಗಳನ್ನು ಕಳವು ಮಾಡಿದ್ದಾರೆ.
ಕಳವಾಗಿರುವ ಆಭರಣಗಳ ಮೌಲ್ಯದ ಬಗ್ಗೆ ಕಾಕರೆಡ್ಡಿ ಅವರು ಮಾಹಿತಿ ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಎಚ್‌ಎಸ್‌ಆರ್ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರ ಮೇಲೆ ಹಲ್ಲೆ -ಬಂಧನ
ಮದ್ಯ ಕುಡಿದದ್ದನ್ನು ಪತ್ತೆ ಹಚ್ಚಲು ಮುಂದಾದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ವ್ಯಕ್ತಿಯೊಬ್ಬನನ್ನು ಹೈಗ್ರೌಂಡ್ಸ್ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಮಹಾಲಕ್ಷ್ಮಿಪುರದಲ್ಲಿ ವಾಸವಾಗಿರುವ ಗಣೇಶ್ (22) ಎಂಬಾತನೇ ಈ ರೀತಿ ದುಂಡಾವರ್ತನೆ ತೋರಿದ್ದು, ಶನಿವಾರ ರಾತ್ರಿ 3.30ಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ.
ಆಗ ಹೈಗ್ರೌಂಡ್ಸ್ ಸಂಚಾರ ಠಾಣೆಯ ಪೊಲೀಸರು ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿರುವವರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ರೇಸ್‌ಕೋರ್ಸ್ ರಸ್ತೆಯ ಬಳಿ ತೊಡಗಿದ್ದರು. ಈ ಸಂದರ್ಭದಲ್ಲಿ ಅಲ್ಲಿಗೆ ಬಂದ ಗಣೇಶ್ ಮದ್ಯ ಸೇವನೆ ಪತ್ತೆ ಪರೀಕ್ಷೆಗೆ ಒಳಪಡಲು ನಿರಾಕರಿಸಿದ.
ಅಲ್ಲದೇ ಅಲ್ಲಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಎಂದು ಪೊಲೀಸರು ತಿಳಿಸಿದ್ದಾರೆ.ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ನಾರಾಯಣಸ್ವಾಮಿ ಅವರು ನೀಡಿದ ದೂರಿನ ಮೇರೆಗೆ ಈತನನ್ನು ವಶಕ್ಕೆ ಪಡೆದು ಕೋರ್ಟ್‌ಗೆ ಹಾಜರುಪಡಿಸಲಾಗಿದೆ ಎಂದು ಹೈಗ್ರೌಂಡ್ಸ್ ಠಾಣೆ ಅಧಿಕಾರಿಗಳು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.