ADVERTISEMENT

ಮಹಿಳಾ ದೌರ್ಜನ್ಯ: ತ್ವರಿತ ಇತ್ಯರ್ಥಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2013, 19:50 IST
Last Updated 20 ಸೆಪ್ಟೆಂಬರ್ 2013, 19:50 IST

ಬೆಂಗಳೂರು: ಮಹಿಳಾ ದೌರ್ಜನ್ಯ ಪ್ರಕರಣಗಳ  ತ್ವರಿತ ಇತ್ಯರ್ಥಕ್ಕೆ ವಿಶೇಷ ನ್ಯಾಯಾಲಯಗಳನ್ನು ರಚಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದ ಪುರಭವನದ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಶಾಸಕ ಆರ್‌. ಅಶೋಕ ಮಾತನಾಡಿ, ‘ದೇಶದಲ್ಲಿ ಇತ್ತೀಚೆಗೆ ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚುತ್ತಿದೆ. ಕಳೆದ ಡಿಸೆಂಬರ್‌ನಲ್ಲಿ ದೆಹಲಿಯ ಬಸ್‌ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಆ ವಿದ್ಯಾರ್ಥಿನಿಯ ಸಾವು ಸಾರ್ವಜನಿಕ ವಲಯದಲ್ಲಿ ದಿಗ್ಬ್ರಮೆ ಮೂಡಿಸಿದೆ. ಈ ಘಟನೆ ಮಾಸುವ ಮುನ್ನವೇ ಮುಂಬೈನ ಶಕ್ತಿ ಮಿಲ್ಸ್‌ನಲ್ಲಿ ಪತ್ರಕರ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.

ಹಿಂದಿನ ಆರು ತಿಂಗಳ ಅವಧಿಯಲ್ಲಿ ಶಕ್ತಮಿಲ್ಸ್‌ನಲ್ಲಿ 10 ಪ್ರಕರಣಗಳು ನಡೆದಿರುವುದು ಆತಂಕಕಾರಿ ವಿಷಯ. ಹೀಗೆ ಮೇಲಿಂದ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಮಹಿಳೆಯರು ಹಾಗೂ ವಿದ್ಯಾರ್ಥಿಗಳ ಪೋಷಕರು ಭಯದಲ್ಲೇ ಬದುಕು ದೂಡುವಂತಾಗಿದೆ’ ಎಂದರು.

ನಗರದಲ್ಲಿ ನಡೆದ ನೇಪಾಳ ಮೂಲದ ಕಾನೂನು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಮಣಿಪಾಲದಲ್ಲಿ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣಗಳು ಅಸುರಕ್ಷತೆಯ ಭಾವವನ್ನು ಹುಟ್ಟು ಹಾಕಿವೆ. ಬಾಲಕಿಯರ ಮೇಲೆ ದೌರ್ಜನ್ಯ ನಡೆಯುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ನಿತ್ಯ ವರದಿಯಾಗುತ್ತಿದೆ. ಆದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹಿಳೆಯರ ಸುರಕ್ಷತೆ ವಿಷಯದಲ್ಲಿ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರು ವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಸದ ಅನಂತಕುಮಾರ್, ‘ದೇಶ ದಲ್ಲಿ ಪ್ರತಿ ವರ್ಷ 31,000 ಮಹಿಳಾ ದೌರ್ಜನ್ಯ ಪ್ರಕರಣಗಳು ನಡೆಯುತ್ತಿವೆ. ದೆಹಲಿಯಲ್ಲಿ ಈ ವರ್ಷದ ಮೊದಲ ಮೂರು ತಿಂಗಳಲ್ಲಿ 393 ಮಹಿಳಾ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಮೊದಲ ಆರು ತಿಂಗಳ ಅವಧಿಯಲ್ಲಿ 457 ಪ್ರಕರಣಗಳು ದಾಖಲಾಗಿವೆ. ಅಂದರೆ, ಪ್ರತಿ ದಿನ ಇಬ್ಬರು ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿದೆ. ದೇಶದ ಈ ದುರವಸ್ಥೆ ಯನ್ನು ತಹಬಂದಿಗೆ ತರುವಲ್ಲಿ ಸರ್ಕಾರ ಕಠಿಣ ಕ್ರಮ ಜರುಗಿಸಬೇಕಿದೆ. ಇಂತಹ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಮಾಡುವಂತಹ ನ್ಯಾಯಲಯ ರಚನೆ ಯಾಗಬೇಕಿದೆ’ ಎಂದು ಆಗ್ರಹಿಸಿದರು.

ಪ್ರತಿಭಟನೆ ನಂತರ ಕಾರ್ಯಕರ್ತರು ನಗರ ಪೊಲೀಸ್‌ ಕಮಿಷನರ್‌ ರಾಘವೇಂದ್ರ ಔರಾದಕರ್‌ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಮಮತಾ ಯಾದವ್‌ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.