ಬೆಂಗಳೂರು: ನಗರದ ಕೊಡಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ 24 ಗಂಟೆಗಳಲ್ಲಿ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ಮಹಿಳೆ ಸೇರಿದಂತೆ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಭದ್ರಪ್ಪಲೇಔಟ್ ಸಮೀಪದ ಮಾರುತಿನಗರ ಎಂಟನೇ ಅಡ್ಡರಸ್ತೆ ನಿವಾಸಿ ರಾಧಾಕೃಷ್ಣ ಎಂಬುವರ ಪುತ್ರ ರಾಜೇಶ್ (24) ಅವರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
`ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ ಅವರು ಕುಟುಂಬ ಸದಸ್ಯರೆಲ್ಲ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಮನೆಯಲ್ಲೇ ನೇಣು ಹಾಕಿಕೊಂಡಿದ್ದಾರೆ. ನನ್ನ ಸಾವಿಗೆ ಯಾರೂ ಕಾರಣರಲ್ಲ. ಅನಾರೋಗ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ರಾಜೇಶ್ ಪತ್ರ ಬರೆದಿಟ್ಟಿದ್ದಾರೆ~ ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತೊಂದು ಪ್ರಕರಣ: ದೇವಪ್ಪಗಾರ್ಡನ್ ಬಡಾವಣೆ ನಿವಾಸಿ ನಟರಾಜ್ ಎಂಬುವರ ಪತ್ನಿ ಅನುಸೂಯ (32) ಅವರು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪತಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಅವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಅವರ ಚೀರಾಟ ಕೇಳಿದ ಅಕ್ಕಪಕ್ಕದ ಮನೆಯವರು ರಕ್ಷಿಸಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ತೀವ್ರ ಸುಟ್ಟ ಗಾಯಗಳಾಗಿ ಅಸ್ವಸ್ಥಗೊಂಡಿದ್ದ ಅವರು ರಾತ್ರಿ ಮೃತಪಟ್ಟರು. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಎರಡೂ ಪ್ರಕರಣಗಳು ದಾಖಲಾಗಿವೆ.
ಚಿನ್ನಾಭರಣ ದರೋಡೆ
ದುಷ್ಕರ್ಮಿಗಳು ಖಾಸಗಿ ಕಂಪೆನಿ ಉದ್ಯೋಗಿಗೆ ಮಾರಕಾಸ್ತ್ರಗಳಿಂದ ಬೆದರಿಸಿ 40 ಗ್ರಾಂ ಚಿನ್ನಾಭರಣ ದರೋಡೆ ಮಾಡಿರುವ ಘಟನೆ ಬಳ್ಳಾರಿ ರಸ್ತೆಯ ಹೆಬ್ಬಾಳ ಮೇಲ್ಸೇತುವೆ ಬಳಿ ಮಂಗಳವಾರ ನಸುಕಿನಲ್ಲಿ ನಡೆದಿದೆ.
ವಿದ್ಯಾರಣ್ಯಪುರ ಬಳಿಯ ದೊಡ್ಡಬೊಮ್ಮಸಂದ್ರ ನಿವಾಸಿ ಸುರೇಂದ್ರ ದರೋಡೆಗೊಳಗಾದವರು. ವೈಯಕ್ತಿಕ ಕೆಲಸದ ನಿಮಿತ್ತ ಹೈದರಾಬಾದ್‌ಗೆ ಹೋಗಿದ್ದ ಅವರು, ಆಂಧ್ರಪ್ರದೇಶ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಬೆಳಗಿನ ಜಾವ ನಗರಕ್ಕೆ ಬಂದು ಹೆಬ್ಬಾಳ ಮೇಲ್ಸೇತುವೆ ಸಮೀಪ ಇಳಿದುಕೊಂಡರು. ಅವರು ಆಟೊಗೆ ಕಾಯುತ್ತಾ ನಿಂತಿದ್ದ ವೇಳೆ, ಅಲ್ಲಿಗೆ ಬೈಕ್‌ಗಳಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬೆದರಿಸಿ ನಾಲ್ಕು ಚಿನ್ನದ ಉಂಗುರಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಡಿಗೇಹಳ್ಳಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಸವಾರ ಸಾವು
ಸಿಂಗಸಂದ್ರದ ಸರ್ವಿಸ್ ರಸ್ತೆಯಲ್ಲಿ ಮಂಗಳವಾರ ಬೈಕ್‌ಗೆ ಕ್ಯಾಂಟರ್ ಡಿಕ್ಕಿ ಹೊಡೆದು ಶಿವಕುಮಾರ್(62) ಎಂಬುವರು ಸಾವನ್ನಪ್ಪಿದ್ದಾರೆ. ಹಿಂಬದಿ ಸವಾರ ರಾಮಾಂಜುನುಲು ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಿವುಕುಮಾರ್ ಮತ್ತು ರಾಮಾಂಜುನುಲು ಅವರು ದೇವರಚಿಕ್ಕನಹಳ್ಳಿಯಲ್ಲಿ ನಿವೇಶನ ನೋಡಲು ಹೋಗಿದ್ದರು. ಸಂಜೆ ಆರು ಗಂಟೆ ಸುಮಾರಿಗೆ ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಬೈಕ್‌ನಲ್ಲಿ ವಾಪಸ್ ಬರುವಾಗ ಹಿಂದಿನಿಂದ ಬಂದ ಕ್ಯಾಂಟರ್ ಅವರಿಗೆ ಡಿಕ್ಕಿ ಹೊಡೆದಿದೆ, ಘಟನೆಯಲ್ಲಿ ಶಿವುಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದರು. ಚಾಲಕನನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಎಲೆಕ್ಟ್ರಾನಿಕ್ ಸಿಟಿ ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.