ADVERTISEMENT

ಮಹೇಶಪ್ಪ ವಜಾಕ್ಕಾಗಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2012, 19:30 IST
Last Updated 8 ಫೆಬ್ರುವರಿ 2012, 19:30 IST

ಬೆಂಗಳೂರು:  ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ.ಎಚ್.ಮಹೇಶಪ್ಪ ಅವರನ್ನು ಸೇವೆಯಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು ನಗರದ ಸ್ವಾತಂತ್ರ್ಯ ಉದ್ಯಾನದ ಬಳಿ ಬುಧವಾರ ಪ್ರತಿಭಟನೆ ನಡೆಸಿದರು.

`ಮಹೇಶಪ್ಪ ಅವರು ರಾಜ್ಯಪಾಲರಿಗೆ ತಪ್ಪು ಮಾಹಿತಿ ನೀಡಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕುಲಪತಿ ಹುದ್ದೆಗೆ ಆಯ್ಕೆಯಾಗಿರುವುದು ಹೈಕೋರ್ಟ್‌ನಲ್ಲಿ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ರಾಜ್ಯಪಾಲರಿಗೆ ನಿರ್ದೇಶಿಸಿದೆ~ ಎಂದು ಎಬಿವಿಪಿ ಕಾರ್ಯದರ್ಶಿ ವಿನಯ್ ಬಿದರೆ ಹೇಳಿದರು.

ಮಹೇಶಪ್ಪ ಅಕ್ರಮ ಎಸಗಿರುವುದು ಹೈಕೋರ್ಟ್ ಆದೇಶದಿಂದ ಸಾಬೀತಾಗಿದ್ದರೂ ಅವರ ವಿರುದ್ಧ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ಶಿಸ್ತು ಕ್ರಮ ಜರುಗಿಸುತ್ತಿಲ್ಲ. ಪ್ರತಿಯಾಗಿ ತನಿಖೆಯ ನೆಪದಲ್ಲಿ ರಾಜ್ಯಪಾಲರು ಮಹೇಶಪ್ಪ ಅವರನ್ನು ರಕ್ಷಿಸಲು ಯತ್ನಿಸುತ್ತಿದ್ದಾರೆ ಎಂದು ವಿನಯ್ ಆರೋಪಿಸಿದರು.

ನೈತಿಕ ಹೊಣೆ ಹೊತ್ತು ಮಹೇಶಪ್ಪ ಅವರು ರಾಜೀನಾಮೆ ನೀಡಬೇಕಿತ್ತು. ಆದರೆ ಅವರು ರಾಜ್ಯಪಾಲರ ನೆರವಿನಿಂದ ಹುದ್ದೆಯಲ್ಲಿ ಮುಂದುವರಿಯಲು ಪ್ರಯತ್ನಿಸುತ್ತಿದ್ದಾರೆ, ಇದು ನಾಚಿಕೆಗೇಡಿನ ಸಂಗತಿ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ವಿಜಾಪುರ, ಬಳ್ಳಾರಿ, ಗುಲ್ಬರ್ಗ, ಹುಬ್ಬಳ್ಳಿ, ಶಿವಮೊಗ್ಗ, ಮೈಸೂರು, ತುಮಕೂರು, ಬೆಂಗಳೂರು ಮತ್ತಿತರ ಜಿಲ್ಲೆಗಳ ಸುಮಾರು 99 ಎಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.