ADVERTISEMENT

ಮಾರ್ಗಸೂಚಿ ಶೀಘ್ರ ಪ್ರಕಟ- ಕಾಗೇರಿ

​ಪ್ರಜಾವಾಣಿ ವಾರ್ತೆ
Published 3 ಮೇ 2012, 19:30 IST
Last Updated 3 ಮೇ 2012, 19:30 IST

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆಯಡಿ ಖಾಸಗಿ ಶಾಲೆಗಳಲ್ಲಿ ಶೇ 25ರಷ್ಟು ಸೀಟುಗಳನ್ನು ಆರ್ಥಿಕವಾಗಿ ಹಿಂದುಳಿದ ವರ್ಗದ ಮಕ್ಕಳಿಗೆ ನೀಡುವ ಸಂಬಂಧ ಶೀಘ್ರದಲ್ಲೇ ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಕರ್ನಾಟಕ ರಾಜ್ಯ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಗುರುವಾರ ಸಂಜೆ ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಹಕ್ಕು ಕಾಯ್ದೆಯನ್ನು ಈ ವರ್ಷವೇ ಜಾರಿಗೊಳಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದರು.

ಶೇ 25ರಷ್ಟು ಸೀಟುಗಳಿಗೆ ಪ್ರವೇಶ ನೀಡುವ ಸಂಬಂಧ ಖಾಸಗಿ ಶಾಲೆಗಳ ಆಡಳಿತ ಮಂಡಳಿಯವರಿಗೆ ಇರುವ ಅನುಮಾನಗಳನ್ನು ಹೋಗಲಾಡಿಸಲು ಮಾರ್ಗಸೂಚಿ ಪ್ರಕಟಿಸಲಾಗುವುದು. ಶಿಕ್ಷಣ ಹಕ್ಕು ಕಾಯ್ದೆ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಪ್ರವೇಶ ಅವಧಿಯನ್ನು ವಿಸ್ತರಿಸಲಾಗುವುದು ಎಂದು ತಿಳಿಸಿದರು. ಒಕ್ಕೂಟದ ಗೌರವ ಅಧ್ಯಕ್ಷ ಪುಟ್ಟಣ್ಣ ಮಾತನಾಡಿ, ಶಿಕ್ಷಣ ಹಕ್ಕು ಕಾಯ್ದೆಗೆ ವಿರೋಧವಿಲ್ಲ.

ಖಾಸಗಿ ಶಾಲೆಗಳಲ್ಲಿ ಈಗಾಗಲೇ ಪ್ರವೇಶ ಮುಗಿದಿರುವುದರಿಂದ ಪ್ರಸಕ್ತ ಸಾಲಿನಿಂದಲೇ ಜಾರಿಗೆ ತರುವುದು ಹೇಗೆ ಎಂಬ ಬಗ್ಗೆ ಗೊಂದಲವಿದೆ. ಈ ಹಿನ್ನೆಲೆಯಲ್ಲಿ ಚರ್ಚೆ ಮಾಡಿದ್ದೇವೆ. ಗೊಂದಲ ನಿವಾರಿಸಿದರೆ ವಿರೋಧ ಮಾಡುವುದಿಲ್ಲ ಎಂದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.