ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಈ ಹಿಂದೆ ರೂಪಿಸಿದ ಮಾರ್ಗಸೂಚಿ ಪ್ರಕಾರವೇ ಮೀಸಲಾತಿ ನಿಗದಿಪಡಿಸಬೇಕು ಎಂದು ಬಿಜೆಪಿ ವಕ್ತಾರ ಸಿ.ಟಿ.ರವಿ ಆಗ್ರಹಪಡಿಸಿದರು.
ಕೋರ್ಟ್ ಆದೇಶದಂತೆ 2001ರ ಜನಗಣತಿ ಪ್ರಕಾರ ವಾರ್ಡ್‌ವಾರು ಮೀಸಲಾತಿ ನಿಗದಿಪಡಿಸಲಾಗಿತ್ತು. ಈಗ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೂ ಅದೇ ಜನಗಣತಿ ಪ್ರಕಾರ ಮೀಸಲಾತಿ ನಿಗದಿಪಡಿಸಬೇಕು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.
ಹಲವು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್‌ಗೆ ಬಹುಮತ ಇಲ್ಲ. ಅಂತಹ ಕಡೆ ಹಿಂಬಾಗಿಲ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಪ್ರಯತ್ನ ನಡೆಸಿದೆ. ಇದಕ್ಕೆ ಪೂರಕವಾಗಿ 2011ರ ಜನಗಣತಿ ಪ್ರಕಾರ ಮೀಸಲಾತಿ ನಿಗದಿಪಡಿಸುವ ಹುನ್ನಾರ ನಡೆಸಿದೆ ಎಂದು ಅವರು ದೂರಿದರು.
ಈ ಹಿಂದಿನ ಮಾರ್ಗಸೂಚಿ ಪ್ರಕಾರವೇ ಮೀಸಲಾತಿ ನಿಗದಿಪಡಿಸಬೇಕು. ಯಾವುದೇ ಕಾರಣಕ್ಕೂ ಅದನ್ನು ಬದಲಿಸಬಾರದು. ಒಂದು ವೇಳೆ ಬದಲಿಸಿದರೆ ಅದರ ವಿರುದ್ಧ ನ್ಯಾಯಾಲಯದಲ್ಲಿ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.