ADVERTISEMENT

ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2012, 19:50 IST
Last Updated 12 ಡಿಸೆಂಬರ್ 2012, 19:50 IST

ಬೆಂಗಳೂರು: ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಹುಣಸೆಕಟ್ಟೆ ಎಂಬಲ್ಲಿ ಅರಣ್ಯ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ವಕೀಲ ವಿನೋದ್ ಅವರು ಯಡಿಯೂರಪ್ಪ ಮತ್ತು ಅವರ ಪುತ್ರರ ವಿರುದ್ಧ ಲೋಕಾಯುಕ್ತ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಇದನ್ನು ರದ್ದು ಮಾಡಬೇಕು ಹಾಗೂ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ಯಡಿಯೂರಪ್ಪ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

ಡಿವಿಎಸ್ ಅರ್ಜಿ ತಿರಸ್ಕೃತ: ಬಾಗಲೂರಿನ ಗೋಮಾಳ ಭೂಮಿಯಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಿದ ಪ್ರಕರಣದ ವಿಚಾರಣೆಗೆ ಲೋಕಾಯುಕ್ತ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ವಿನಾಯಿತಿ ನೀಡಲು ಕೋರಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾ ಮಾಡಿದೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎನ್. ಕೇಶವ ನಾರಾಯಣ ನೇತೃತ್ವದ ಏಕಸದಸ್ಯ ಪೀಠ, ಮನವಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೇ ಸಲ್ಲಿಸಬಹುದು ಎಂದು ಹೇಳಿದೆ.

ಸೂರಿಂಜೆ ಜಾಮೀನು ಅರ್ಜಿ: ಮಂಗಳೂರಿನ ಮಾರ್ನಿಂಗ್ ಮಿಸ್ಟ್ ಹೋಂ ಸ್ಟೇ ಮೇಲೆ ನಡೆದ ದಾಳಿ ಪ್ರಕರಣದಲ್ಲಿ ಬಂಧನದಲ್ಲಿರುವ ಪತ್ರಕರ್ತ ನವೀನ್ ಸೂರಿಂಜೆ ಅವರ ಜಾಮೀನು ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.