ADVERTISEMENT

ಯುಪಿಎ ಸರ್ಕಾರದ ವಜಾಕ್ಕೂ ಆಗ್ರಹಿಸಲಿ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2011, 19:30 IST
Last Updated 17 ಅಕ್ಟೋಬರ್ 2011, 19:30 IST

ಬೆಂಗಳೂರು: ರಾಜ್ಯದ ಬಿಜೆಪಿ ಸರ್ಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರನ್ನು ಒತ್ತಾಯಿಸುವುದಾಗಿ ಹೇಳಿರುವ ಕಾಂಗ್ರೆಸ್ ಮುಖಂಡರು ಕೇಂದ್ರದ ಯುಪಿಎ ಸರ್ಕಾರವನ್ನೂ ವಜಾ ಮಾಡುವಂತೆ ರಾಷ್ಟ್ರಪತಿಗಳನ್ನು ಒತ್ತಾಯಿಸಲಿ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸವಾಲು ಹಾಕಿದರು.

ಪಕ್ಷದ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಯಾವ ನೈತಿಕ ನೆಲೆಗಟ್ಟಿನಲ್ಲಿ ಕಾಂಗ್ರೆಸ್ ನಾಯಕರು ರಾಜ್ಯ ಸರ್ಕಾರದ ವಜಾಕ್ಕೆ ಆಗ್ರಹಿಸುತ್ತಿದ್ದಾರೆ? ಕಾಂಗ್ರೆಸ್ಸಿಗರಿಗೆ ಅವರಲ್ಲೇ ಇರುವ ಹುಳುಕುಗಳು ಕಾಣಿಸುತ್ತಿಲ್ಲವೇ? ರಾಜ್ಯದ ಸಮಸ್ಯೆಯ ಕುರಿತು ಮಾತನಾಡಲು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಯಾವ ಅಧಿಕಾರ ಇದೆ? ವಿಧಾನಸಭೆಯಲ್ಲಿ ತೋಳೇರಿಸಿದ್ದೊಂದೇ ಅವರ ಸಾಧನೆಯೇ?~ ಎಂದು ಪ್ರಶ್ನಿಸಿದರು.

ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ರಾತ್ರಿ ವೇಳೆಯಲ್ಲಿ ಮುಖಕ್ಕೆ ಬಟ್ಟೆ ಸುತ್ತಿಕೊಂಡು ಅವರಲ್ಲಿಗೆ ತೆರಳಿ ತಮ್ಮ ಕೆಲಸ ಮಾಡಿಸಿಕೊಳ್ಳುತ್ತಿದ್ದ ಕಾಂಗ್ರೆಸ್ಸಿಗರು ಈಗ ಯಾವ ಮುಖ ಇಟ್ಟುಕೊಂಡು ಬಿಜೆಪಿಯನ್ನು ಟೀಕಿಸುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಅಕ್ರಮ ಗಣಿಗಾರಿಕೆ ಕುರಿತ ಲೋಕಾಯುಕ್ತ ವರದಿಯಲ್ಲಿ ಕಾಂಗ್ರೆಸ್ ಮುಖಂಡರ ಹೆಸರು ಇಲ್ಲದಿರುವುದಕ್ಕೆ ಯಾರೂ ಸಂತಸಪಡಬೇಕಾಗಿಲ್ಲ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ನಡೆದ ಅವ್ಯವಹಾರಗಳನ್ನು ಶೀಘ್ರದಲ್ಲಿಯೇ ದಾಖಲೆಗಳ ಸಮೇತ ಬಯಲು ಮಾಡುವುದಾಗಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.