ADVERTISEMENT

ರಸ್ತೆ ಗುಂಡಿ ಮುಚ್ಚಲು ವಾರದ ಗಡುವು

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2017, 19:30 IST
Last Updated 4 ಅಕ್ಟೋಬರ್ 2017, 19:30 IST

ಬೆಂಗಳೂರು: ನಗರದ ಪ್ರಮುಖ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ವಾರದೊಳಗೆ ಮುಚ್ಚದಿದ್ದರೆ ಸಂಬಂಧಿಸಿದ ಕಾರ್ಯನಿರ್ವಾಹಕ ಎಂಜಿನಿಯರ್‌ ಹಾಗೂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗಳನ್ನು ಅಮಾನತುಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇಯರ್‌ ಆರ್‌.ಸಂಪತ್‌ರಾಜ್‌ ಅವರಿಗೆ ನಿರ್ದೇಶನ ನೀಡಿದ್ದಾರೆ.

ರಸ್ತೆ ಗುಂಡಿ ಮುಚ್ಚುವ ಕಾಮಗಾರಿಯ ಪ್ರಗತಿ ಬಗ್ಗೆ ಬುಧವಾರ ಮಾಹಿತಿ ಪಡೆದ ಮುಖ್ಯಮಂತ್ರಿ, ಸಮರೋಪಾದಿಯಲ್ಲಿ ರಸ್ತೆ ಗುಂಡಿ ಮುಚ್ಚಲು ಸ್ಪಂದಿಸದ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು ಎಂದು ಮೇಯರ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಲು ವಲಯವಾರು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಮಹದೇವಪುರ, ಕೆ.ಆರ್‌.ಪುರ ಹಾಗೂ ಪೂರ್ವ ವಲಯಗಳಲ್ಲಿ ಮಂಗಳವಾರ ರಾತ್ರಿಯಿಂದ ಬೆಳಿಗ್ಗೆವರೆಗೆ ರಸ್ತೆ ಗುಂಡಿ ಮುಚ್ಚುವ ಕಾಮಗಾರಿಯನ್ನು ನಡೆಸಲಾಯಿತು. ಸುಮಾರು 1,000 ರಸ್ತೆ ಗುಂಡಿಗಳನ್ನು ಮುಚ್ಚಲಾಯಿತು. ಬುಧವಾರ ರಾತ್ರಿ ಮಳೆ ಸುರಿದಿದ್ದರಿಂದ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅವರು ತಿಳಿಸಿದರು.

ADVERTISEMENT

‘ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಲು ಆಯಾ ವಲಯಗಳ ಜಂಟಿ ಆಯುಕ್ತರು ಮತ್ತು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗಳನ್ನು ಒಳಗೊಂಡ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಕಾಮಗಾರಿಯ ಉಸ್ತುವಾರಿ ನೋಡಿಕೊಳ್ಳಲಿವೆ. ನಾನು ರಾತ್ರಿ ವೇಳೆಯೂ ದಿಢೀರ್‌ ಭೇಟಿ ನೀಡಿ ಕಾಮಗಾರಿ ಪರಿಶೀಲಿಸುತ್ತಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.