ಬೆಂಗಳೂರು: ‘ಬೆಂಗಳೂರು ನಗರ ಜಿಲ್ಲೆಯಲ್ಲಿ ಹಾಕಲಾಗಿರುವ ರಾಜಕೀಯ ಪಕ್ಷಗಳಿಗೆ ಸಂಬಂಧಿಸಿದ ಎಲ್ಲ ಹೋರ್ಡಿಂಗ್ಗಳನ್ನು ಶನಿವಾರದೊಳಗೆ ತೆರವುಗೊಳಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಬಿಬಿಎಂಪಿ ಆಯುಕ್ತ ಎಂ. ಲಕ್ಷ್ಮಿನಾರಾಯಣ ಸೂಚನೆ ನೀಡಿದ್ದಾರೆ.
ಗುರುವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮಾಹಿತಿ ನೀಡಿದರು. ‘ಬೆಂಗಳೂರು ನಗರ ಜಿಲ್ಲೆಯಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ವಿವರಿಸಿದರು.
‘ಸರ್ಕಾರದ ಯೋಜನೆಗಳಿಗೆ ಸಂಬಂಧಿಸಿದಂತೆ ಹಾಕಿರುವ ಫಲಕಗಳಲ್ಲಿ ರಾಜಕಾರಣಿಗಳ ಭಾವಚಿತ್ರಗಳಿದ್ದರೆ, ಅಂತಹ ಜಾಹೀರಾತು ಫಲಕಗಳನ್ನು ಕೂಡಲೇ ತೆರವುಗೊಳಿಸಬೇಕು ಎಂಬ ಸೂಚನೆಯನ್ನು ವಾರ್ತಾ ಇಲಾಖೆಗೂ ನೀಡಲಾಗಿದೆ’ ಎಂದು ಹೇಳಿದರು. ‘ಅಧಿಕಾರಿಗಳನ್ನು ಹೊರತುಪಡಿಸಿ ಬೇರೆ ಯಾರಿಗೂ ಸರ್ಕಾರಿ ವಾಹನ ಬಳಸಲು ಅವಕಾಶ ಇಲ್ಲ. ಧ್ವನಿವರ್ಧಕಗಳನ್ನು ರಾತ್ರಿ 10ರವರೆಗೆ ಮಾತ್ರ ಉಪಯೋಗಿಸಬೇಕು’ ಎಂದು ತಿಳಿಸಿದರು.
‘ಹೊಸ ಮತದಾರರ ನೋಂದಣಿಗೆ ವಿಶೇಷ ಒತ್ತು ನೀಡಲಾಗಿದ್ದು, ಮತದಾನದಲ್ಲಿ ಪಾಲ್ಗೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡಿಸಲು ಆಂದೋಲನ ನಡೆಸಲಾಗುತ್ತದೆ’ ಎಂದು ಅವರು ಹೇಳಿದರು. ‘ಕಳೆದ ಲೋಕಸಭಾ ಚುನಾವಣೆಯಲ್ಲಿ ಶೇ 58ರಷ್ಟು ಮತದಾನವಾಗಿತ್ತು. ಈ ಸಲ ಅದರ ಪ್ರಮಾಣವನ್ನು ಶೇ 75ಕ್ಕೆ ಹೆಚ್ಚಿಸುವ ಗುರಿ ಹೊಂದಿದ್ದೇವೆ. ಸರ್ಕಾರೇತರ ಸಂಸ್ಥೆಗಳ ನೆರವಿನಿಂದ ಜಾಗೃತಿ ಅಭಿಯಾನ ನಡೆಸಲಾಗುತ್ತದೆ’ ಎಂದು ವಿವರಿಸಿದರು.
ಹಿರಿಯ ಐಎಎಸ್ ಅಧಿಕಾರಿ ಕೆ.ಆರ್. ನಿರಂಜನ್, ‘ನಗರ ಜಿಲ್ಲೆಯಲ್ಲಿ ಒಟ್ಟು 7,712 ಮತದಾನ ಕೇಂದ್ರಗಳನ್ನು ತೆರೆಯಲಾಗುತ್ತದೆ. 45 ಸಾವಿರ ಸಿಬ್ಬಂದಿಯನ್ನು ಚುನಾವಣಾ ಪ್ರಕ್ರಿಯೆ ನಡೆಸಲು ಬಳಸಿಕೊಳ್ಳಲಾಗುತ್ತದೆ’ ಎಂದು ಹೇಳಿದರು.
‘ಚುನಾವಣಾ ಆಯೋಗದ ಅನುಮತಿ ಇಲ್ಲದೆ ಯಾವುದೇ ಅಧಿಕಾರಿಯನ್ನು ವರ್ಗಾವಣೆ ಮಾಡಲು ಆಸ್ಪದ ಇಲ್ಲ. ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ನಗರಕ್ಕೆ ಹಣ ಹಾಗೂ ಸಾರಾಯಿ ಹರಿದುಬರದಂತೆ ತಡೆಯಲು ಚೆಕ್ ಪೋಸ್ಟ್‌ಗಳನ್ನು ಹಾಕಲಾಗುತ್ತದೆ’ ಎಂದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.