ಯಲಹಂಕ: `ತಾಲಿಬಾನ್ ಭಯೋತ್ಪಾದನಾ ಸಂಘಟನೆಗಳು ದೇಶದಲ್ಲಿ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ' ಎಂದು ಉಪಮುಖ್ಯಮಂತ್ರಿ ಆರ್.ಅಶೋಕ ಹೇಳಿದರು.
ರಾಜ್ಯ ಪೊಲೀಸ್ ಗೃಹ ನಿರ್ಮಾಣ ನಿಗಮವು ನಗರದಲ್ಲಿ ಸುಮಾರು 2.50 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಅಮೃತಹಳ್ಳಿ ಹಾಗೂ ಸಂಪಿಗೆಹಳ್ಳಿ ಪೊಲೀಸ್ ಠಾಣೆಗಳ ನೂತನ ಕಟ್ಟಡಗಳನ್ನು ಅವರು ಸೋಮವಾರ ಉದ್ಘಾಟಿಸಿ ಮಾತನಾಡಿದರು.
ಉಗ್ರ ಅಜ್ಮಲ್ ಕಸಾಬ್‌ನನ್ನು ಗಲ್ಲಿಗೇರಿಸಿರುವುದರಿಂದ ದೇಶದ ಮೇಲೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಕೆಲ ಭಯೋತ್ಪಾದನಾ ಸಂಘಟನೆಗಳು ಬೆದರಿಕೆ ಹಾಕಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಸಾರ್ವಜನಿಕರ ರಕ್ಷಣೆಗೆ ಗೃಹ ಇಲಾಖೆ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಸಾಕಷ್ಟು ಭದ್ರತಾ ಕ್ರಮ ಕೈಗೊಳ್ಳಲಾಗಿದ್ದು, ಜನರು ಆತಂಕಪಡುವ ಅಗತ್ಯವಿಲ್ಲ. ಯಾವುದೇ ರೀತಿಯ ಪರಿಸ್ಥಿತಿಯನ್ನು ಎದುರಿಸಲು ರಾಜ್ಯ ಪೊಲೀಸರು ಸನ್ನದ್ಧರಾಗಿದ್ದಾರೆ ಎಂದರು.
ರಾಜ್ಯದಲ್ಲಿ ಇತ್ತೀಚೆಗೆ ಬಂಧಿಸಲಾಗಿದ್ದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಹಾಗೂ ಹರ್ಕತ್ ಉಲ್ ಜಿಹಾದ್ ಅಲ್ ಇಸ್ಲಾಮಿ (ಹುಜಿ) ಭಯೋತ್ಪಾದನಾ ಸಂಘಟನೆಯ ಶಂಕಿತ ಉಗ್ರರನ್ನು ಹೆಚ್ಚಿನ ವಿಚಾರಣೆಗೆ ವಶಕ್ಕೆ ನೀಡುವಂತೆ ದೆಹಲಿ ಸರ್ಕಾರ ಮನವಿ ಮಾಡಿದೆ. ಆ ಶಂಕಿತ ಉಗ್ರರನ್ನು ಸದ್ಯದಲ್ಲೇ ದೆಹಲಿ ಪೊಲೀಸರ ವಶಕ್ಕೆ ಒಪ್ಪಿಸಲಾಗುತ್ತದೆ ಎಂದು ಮಾಹಿತಿ ನೀಡಿದರು. ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದ್ದು, ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನಿವಾರಿಸುವ ನಿಟ್ಟಿನಲ್ಲಿ 300 ಎಸ್‌ಐಗಳನ್ನು ತರಬೇತಿಗೆ ಕಳುಹಿಸಲಾಗಿದೆ. ತರಬೇತಿ ಪೂರ್ಣಗೊಂಡ ಕೂಡಲೇ ಅವರನ್ನು ವಿವಿಧ ಠಾಣೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಿಯೋಜಿಸಲಾಗುವುದು ಎಂದು ತಿಳಿಸಿದರು.
ಸಂಸದ ಡಿ.ಬಿ.ಚಂದ್ರೇಗೌಡ, ಶಾಸಕ ಕೃಷ್ಣಬೈರೇಗೌಡ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಲಾಲ್ ರೋಕುಮ ಪಚಾವ್. ನಗರ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ, ಹೆಚ್ಚುವರಿ ಪೊಲೀಸ್ ಕಮಿಷನರ್ ಟಿ.ಸುನಿಲ್‌ಕುಮಾರ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.