ADVERTISEMENT

ರಾಜ್ಯದಲ್ಲಿ 1.80 ಲಕ್ಷ ಹುದ್ದೆ ಖಾಲಿ ನೇಮಕಾತಿಗೆ ಎಸ್‌ಡಿಪಿಐ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2014, 19:36 IST
Last Updated 5 ಮಾರ್ಚ್ 2014, 19:36 IST

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಒತ್ತಾಯಿಸಿ ಸೋಷಿಯಲ್‌ ಡೆಮಾಕ್ರಟಿಕ್ ಪಾರ್ಟಿ ಆಫ್‌ ಇಂಡಿಯಾ (ಎಸ್‌ಡಿಪಿಐ) ಕಾರ್ಯಕರ್ತರು ನಗರದ ಪುರಭವನದ ಬಳಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಎಸ್‌ಡಿಪಿಐ ರಾಜ್ಯ ಘಟಕದ ಅಧ್ಯಕ್ಷ ಅಬ್ದುಲ್‌ ಮಜೀದ್, ‘ರಾಜ್ಯದ 60ಕ್ಕೂ ಹೆಚ್ಚು ಇಲಾಖೆಗಳಲ್ಲಿ ಒಟ್ಟು 1.80 ಲಕ್ಷ ಹುದ್ದೆಗಳು ಖಾಲಿ ಇವೆ. ಆ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ. ಉದ್ಯೋಗ ಕಲ್ಪಿಸುವಂತೆ ಕೋರಿ ಸಾವಿರಾರು ಯುವಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನತಾ ದರ್ಶನದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಆ ಅರ್ಜಿಗಳು ಕಸದ ಬುಟ್ಟಿ ಸೇರಿವೆ’ ಎಂದು ಆರೋಪಿಸಿದರು.

‘ಹಿಂದಿನ ಬಿಜೆಪಿ ಸರ್ಕಾರವು ನೌಕರರ ನಿವೃತ್ತಿ ವಯಸ್ಸನ್ನು 58 ರಿಂದ 60 ವರ್ಷಕ್ಕೆ ಏರಿಸುವ ಮೂಲಕ ನಿರುದ್ಯೋಗ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಕೂಡ ಸದ್ಯ ಯಾವುದೇ ಹುದ್ದೆಗಳಿಗೆ ಅರ್ಜಿ ಆಹ್ವಾನಿಸುವುದಿಲ್ಲ ಎಂದು ಹೇಳಿದೆ. ಈ ಜನವಿರೋಧಿ ನೀತಿಗಳಿಗೆ  ಮುಂಬರುವ ಚುನಾವಣೆಗಳಲ್ಲಿ ಪಾಠ ಕಲಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಎಸ್‌ಡಿಪಿಐ ನಗರ ಘಟಕದ ಅಧ್ಯಕ್ಷ ಫಯಾಜ್‌ ಅಹಮದ್‌ ಮಾತನಾಡಿ, ‘ದೇಶದ ಭವಿಷ್ಯದ ದೃಷ್ಟಿಯಿಂದ ಗುಣಮಟ್ಟದ ಶಿಕ್ಷಣ ಹಾಗೂ ಉದ್ಯೋಗಾವಕಾಶ ಕಲ್ಪಿಸುವುದು ಸರ್ಕಾರದ ಕರ್ತವ್ಯ. ಉನ್ನತ ಶಿಕ್ಷಣ ಪೂರ್ಣಗೊಳಿಸಿದರೂ ಉದ್ಯೋಗ ಸಿಗದ ಕಾರಣ ಕೆಲ ಯುವಕರು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ಈ ಕಾರಣದಿಂದ ರಾಜ್ಯದಲ್ಲಿ ಕೊಲೆ, ಸುಲಿಗೆ, ದರೋಡೆ, ಕಳ್ಳತನ, ವಂಚನೆಯಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲಸ ಸಿಗದ ಬಡ ಪೋಷಕರು, ಶಾಲೆಗೆ ಹೋಗಬೇಕಾದ ತಮ್ಮ ಮಕ್ಕಳನ್ನು ಭಿಕ್ಷಾಟನೆಗೆ ಕಳುಹಿಸುತ್ತಿದ್ದಾರೆ’ ಎಂದು  ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.