ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಈ ಬಗ್ಗೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯ ಬಿಜೆಪಿ, ರಾಜ್ಯಪಾಲರನ್ನು ಆಗ್ರಹಪಡಿಸಿದೆ.
ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಡಿ.ವಿ.ಸದಾನಂದ ಗೌಡ, ಶಾಸಕ ಆರ್.ಅಶೋಕ ಸೇರಿದಂತೆ ಇತರರು ಗುರುವಾರ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರನ್ನು ಭೇಟಿ ಮಾಡಿ ಈ ಸಂಬಂಧ ಮನವಿ ಪತ್ರ ಸಲ್ಲಿಸಿದರು.
‘ಬೆಂಗಳೂರಿನ ದೇವಸಂದ್ರ ವಾರ್ಡ್‌ನ ಪಾಲಿಕೆ ಸದಸ್ಯೆ ಮಂಜುಳಾ ದೇವಿ ಅವರ ಪತಿ ಶ್ರೀನಿವಾಸ ಅವರನ್ನು ಬುಧವಾರ ಹಾಡಹಗಲೇ ಹತ್ಯೆ ಮಾಡಲಾಗಿದೆ. ಈ ಕೃತ್ಯದ ಹಿಂದೆ ರಾಜಕೀಯ ಮುಖಂಡರ ಕೈವಾಡ ಇದ್ದು, ಸಮಗ್ರ ತನಿಖೆ ನಡೆಸಬೇಕು’ ಎಂದು ಆಗ್ರಹಪಡಿಸಿದರು.
ಈ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ 1,350 ಕೊಲೆ, 824 ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ಭೂಗತ ಪಾತಕಿಗಳ ಚಟುವಟಿಕೆಗಳೂ ಹೆಚ್ಚಾಗಿವೆ ಎಂದು ಅವರು ದೂರಿದರು. ಸೂಕ್ತ ಕ್ರಮ ತೆಗೆದುಕೊಳ್ಳುವ ಭರವಸೆಯನ್ನು ರಾಜ್ಯಪಾಲರು ನೀಡಿದರು ಎಂದು ಗೌಡರು ಸುದ್ದಿಗಾರರಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.