ADVERTISEMENT

ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಪ್ರತಿಭಟನೆ

ಎಪಿಎಲ್ ಪಡಿತರ ಚೀಟಿಗಳಿಗೆ ಅಕ್ಕಿ ವಿತರಣೆ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 17 ಜೂನ್ 2013, 19:49 IST
Last Updated 17 ಜೂನ್ 2013, 19:49 IST

ಬೆಂಗಳೂರು: ಎಪಿಎಲ್ ಪಡಿತರ ಚೀಟಿಗಳಿಗೆ ಅಕ್ಕಿ ವಿತರಣೆಯನ್ನು ನಿಲ್ಲಿಸುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್‌ಐ) ಮತ್ತು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಕಾರ್ಯಕರ್ತರು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಡಿವೈಎಫ್‌ಐ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗರಾಜು, `ರಾಜ್ಯದಲ್ಲಿ 35 ಲಕ್ಷಕ್ಕೂ ಹೆಚ್ಚು ಎಪಿಎಲ್ ಪಡಿತರ ಚೀಟಿಗಳಿವೆ. ಸರ್ಕಾರದ ನಿರ್ಧಾರದಿಂದ ಎಪಿಎಲ್ ಪಡಿತರ ಚೀಟಿಗಳನ್ನು ಹೊಂದಿರುವ ಕುಟುಂಬಗಳು ಮುಕ್ತ ಮಾರುಕಟ್ಟೆಯಲ್ಲಿ ಅಧಿಕ ಬೆಲೆ ಕೊಟ್ಟು ಅಕ್ಕಿ ಖರೀದಿಸಬೇಕಾಗುತ್ತದೆ.

ಇದರಿಂದ ಮಧ್ಯಮ ವರ್ಗದ ಜನರಿಗೆ ಹೊರೆಯಾಗುವುದಲ್ಲದೇ, ಅಕ್ಕಿ ಬೆಲೆ ಇನ್ನಷ್ಟು ಹೆಚ್ಚಾಗುತ್ತದೆ. ಹೀಗಾಗಿ ಸರ್ಕಾರ ತನ್ನ ನಿರ್ಧಾರವನ್ನು ವಾಪಸ್ ಪಡೆಯಬೇಕು' ಎಂದು ಒತ್ತಾಯಿಸಿದರು.

`ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನ ಎಪಿಎಲ್ ಪಡಿತರ ಚೀಟಿಗಳಿಗೂ ಕಡಿಮೆ ಬೆಲೆಯಲ್ಲಿ ಅಕ್ಕಿ ವಿತರಿಸುವ ಭರವಸೆ ನೀಡಿದ್ದ ಸಿದ್ದರಾಮಯ್ಯ ಈಗ ಮಾತಿಗೆ ತಪ್ಪುತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿರುವ ಸಂದರ್ಭದಲ್ಲಿ ಎಪಿಎಲ್ ಪಡಿತರ ಚೀಟಿಗಳಿಗೆ ಅಕ್ಕಿ ವಿತರಣೆ ಮಾಡದೇ ಹೋದರೆ ಮಧ್ಯಮ ವರ್ಗದ ಜನರ ಆರ್ಥಿಕ ಸ್ಥಿತಿ ಹದಗೆಡಲಿದೆ.

ರಾಜ್ಯ ಸರ್ಕಾರ ಬಿಪಿಎಲ್ ಪಡಿತರ ಚೀಟಿದಾರರಿಗೆ ಅನುಕೂಲ ಮಾಡಿಕೊಡಲು ಮುಂದಾಗಿ ಮಧ್ಯಮ ವರ್ಗದ ಜನರ ಮೇಲೆ ಹೊರೆ ಹಾಕುವುದು ಸರಿಯಲ್ಲ' ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.