ADVERTISEMENT

ರೂ 5,265 ಕೋಟಿ ಯೋಜನೆಗೆ ಪ್ರಸ್ತಾವ

ಜೆನರ್ಮ್: ಇತರ ನಗರಗಳಿಗೂ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2013, 19:59 IST
Last Updated 3 ಸೆಪ್ಟೆಂಬರ್ 2013, 19:59 IST

ಬೆಂಗಳೂರು: ಜವಾಹರಲಾಲ್ ನೆಹರೂ ರಾಷ್ಟ್ರೀಯ ನಗರ ಪುನರುತ್ಥಾನ ಯೋಜನೆಯಡಿ (ಜೆನರ್ಮ್) ಪ್ರಸಕ್ತ ವರ್ಷ ರೂ 5265.22 ಕೋಟಿ ವೆಚ್ಚದ 61 ಯೋಜನೆಗಳ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ವಿನಯ್‌ಕುಮಾರ್ ಸೊರಕೆ ಹೇಳಿದರು.

ರಾಜ್ಯಮಟ್ಟದ ಮಂಜೂರಾತಿ ಸಮಿತಿ ಒಪ್ಪಿಗೆ ನೀಡಿದ ಈ ಯೋಜನೆಗಳಿಗೆ ಕೇಂದ್ರದಿಂದ ಹಸಿರು ನಿಶಾನೆ ಕಾಯಲಾಗುತ್ತಿದೆ ಎಂದು ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸದ್ಯಕ್ಕೆ ಬೆಂಗಳೂರು, ಮೈಸೂರಿನಲ್ಲಿ ಮಾತ್ರ ಜೆನರ್ಮ್‌ನಡಿ 61 ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಯೋಜನೆ ಅನುಷ್ಠಾನಕ್ಕೆ ಹಿಂದೆ ನಿಗದಿಪಡಿಸಿದ್ದ ಜನಸಂಖ್ಯೆಯ ಮಿತಿಯನ್ನು ಕೇಂದ್ರ ಸರ್ಕಾರ ಈಚೆಗೆ ತೆಗೆದು ಹಾಕಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಬೇರೆ ನಗರಗಳಿಗೂ ಈ ಯೋಜನೆ ವಿಸ್ತರಿಸಲಾಗುವುದು ಎಂದರು.

ಮೇಲು ಸೇತುವೆ, ಬಸ್ ನಿಲ್ದಾಣ ನಿರ್ಮಾಣ ಇತ್ಯಾದಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಜೆನರ್ಮ್ ಯೋಜನೆಯಡಿ ಕೈಗೆತ್ತಿಕೊಂಡಿರುವ ಕಾಮಗಾರಿಗಳ ಅನುಷ್ಠಾನ ಸಮರ್ಪಕವಾಗಿ ಆಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೀರು ಸರಬರಾಜು ಮತ್ತು ಒಳಚರಂಡಿ ಸೌಲಭ್ಯ ಕಲ್ಪಿಸಲು ಹುಡ್ಕೊದಿಂದ ರೂ 250 ಕೋಟಿ ನೆರವು ಪಡೆಯಲಾಗುವುದು. ಈಗಾಗಲೇ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮೂಲಕ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದರು.

ಸಚಿವರು ಹೇಳಿದ್ದು: ಸಣ್ಣ ಮತ್ತು ಮಧ್ಯಮ ನಗರಗಳಲ್ಲಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಯೋಜನೆಯಡಿ ರೂ 711.92 ಕೋಟಿ ವೆಚ್ಚದ 17 ನೀರು ಸರಬರಾಜು ಯೋಜನೆಗಳಿಗೆ ಮಂಜೂರಾತಿ ನೀಡಿ, ಅನುಮೋದನೆಗಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆರು ಯೋಜನೆಗಳಿಗೆ ಅನುಮೋದನೆ ದೊರೆತಿದ್ದು,     ರೂ 165 ಕೋಟಿ ಅನುದಾನ ಬಿಡುಗಡೆಯಾಗಿದೆ.

ಆಧುನಿಕ ಕರ್ನಾಟಕ ನಗರ ನೀರು ಸರಬರಾಜು ಯೋಜನೆಯಡಿ ಬೆಳಗಾವಿ, ಗುಲ್ಬರ್ಗ, ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನದ 24 ಗಂಟೆ ಕುಡಿಯುವ ನೀರು ಪೂರೈಸಲು ರೂ 1760 ಕೋಟಿ ವೆಚ್ಚದ ನೀಲನಕ್ಷೆ ಸಿದ್ಧವಾಗಿದೆ. ಸರ್ಕಾರಿ - ಖಾಸಗಿ ಸಹಭಾಗಿತ್ವದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲು ವಿಶ್ವಬ್ಯಾಂಕ್‌ನಿಂದ ನೆರವು ಪಡೆಯಲಾಗುವುದು.

ಹೊಸದಾಗಿ ಅಸ್ತಿತ್ವಕ್ಕೆ ಬರಲಿರುವ ಮೂರು ಮಹಾನಗರ ಪಾಲಿಕೆಗಳು ಸೇರಿದಂತೆ ಹತ್ತು ಮಹಾನಗರ ಪಾಲಿಕೆಗಳಿಗೆ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ ಒಂದು ಸಾವಿರ ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ. ಈ ಬಗ್ಗೆ ಮಾರ್ಗದರ್ಶನ ನೀಡಲು ಪಾಲಿಕೆ ಸದಸ್ಯರಿಗೆ ಕಾರ್ಯಾಗಾರ ಏರ್ಪಡಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.