ADVERTISEMENT

ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ

ಡೊಡ್ಡಕನ್ನಳ್ಳಿ-ಕೊಡತಿ ಗ್ರಾಮಗಳಿಗೆ ಸಂಪರ್ಕ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2012, 20:17 IST
Last Updated 4 ಡಿಸೆಂಬರ್ 2012, 20:17 IST

ಮಹದೇವಪುರ:  ಇಲ್ಲಿನ ದೊಡ್ಡಕನ್ನಳ್ಳಿ ಹಾಗೂ ಕೊಡತಿ ಗ್ರಾಮಗಳ ನಡುವೆ ಇರುವ ರೈಲ್ವೆ ಗೇಟ್ ಬಳಿಯಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಆರೋಗ್ಯ ಸಚಿವ ಅರವಿಂದ ಲಿಂಬಾವಳಿ ಅವರು ಮಂಗಳವಾರ ಚಾಲನೆ ನೀಡಿದರು.

ಗುದ್ದಲಿ ಪೂಜೆಯನ್ನು ನೆರವೇರಿಸಿದ ಬಳಿಕ ಮಾತನಾಡಿದ ಸಚಿವರು, `ಸರ್ಜಾಪುರ-ಬೆಂಗಳೂರು ರಸ್ತೆಯಲ್ಲಿ ದಿನದಿಂದ ದಿನಕ್ಕೆ ವಾಹನಗಳ ದಟ್ಟಣೆ ಹೆಚ್ಚಾಗುತ್ತಿದೆ. ಅದರಲ್ಲೂ ಈ ರಸ್ತೆಯ ಮಧ್ಯಭಾಗದಲ್ಲಿರುವ ರೈಲ್ವೆ ಗೇಟ್ ಪ್ರದೇಶದಲ್ಲಿ ವಾಹನಗ ಓಡಾಟಕ್ಕೆ ತೀವ್ರ ತೊಂದರೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಸ್ಥಳದಲ್ಲಿ ಅಗತ್ಯವಾದ ಮೇಲ್ಸೇತುವೆಯನ್ನು ನಿರ್ಮಾಣ ಮಾಡಲಾಗುತ್ತಿದೆ' ಎಂದರು.

ಆದಷ್ಟು ಬೇಗನೆ ಕಾಮಗಾರಿ ಆರಂಭಗೊಳ್ಳಲಿದ್ದು, ಮುಂದಿನ ವರ್ಷದಲ್ಲಿ ಜನತೆಯ ಸುಗಮ ಸಂಚಾರಕ್ಕೆ ಸಿದ್ದಗೊಳ್ಳಲಿದೆ ಎಂದು ಭರವಸೆ ನೀಡಿದ ಅವರು `ಮೇಲ್ಸೇತುವೆಗಾಗಿ 1500 ಚದರ ಮೀಟರ್ ಜಾಗವನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಅದಕ್ಕೆ ಬದಲಿಯಾಗಿ ಟಿಡಿಆರ್ ಪತ್ರಗಳನ್ನು ನೀಡಲಾಗಿದೆ' ಎಂದರು. `ಹೂಡಿ ಬಳಿ ನಿರ್ಮಾಣ ಹಂತದಲ್ಲಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯು ಮೂರ್ನಾಲ್ಕು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಅದಾದ ಬಳಿಕ ಸಾರ್ವಜನಿಕರ ಸಂಚಾರಕ್ಕೆ ಮೇಲ್ಸೇತುವೆಯನ್ನು ಮುಕ್ತಗೊಳಿಸಲಾಗುವುದು' ಎಂದು ಅವರು ತಿಳಿಸಿದರು.

`ಕ್ಷೇತ್ರ ವ್ಯಾಪ್ತಿಯಲ್ಲಿ ಸುಗಮ ಸಂಚಾರಕ್ಕೆ ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳಲಾಗುತ್ತಿದೆ. ಸಿಗ್ನಲ್ ಮುಕ್ತ ವೃತ್ತಗಳು ಮತ್ತು ರೈಲ್ವೆ ಮೇಲ್ಸೇತುವೆಗಳ ಮೂಲಕ ನಾಗರಿಕರು ಮತ್ತು ವಾಹನ ಸವಾರರ ನಿತ್ಯ ಬವಣೆಗೆ ಪರಿಹಾರವನ್ನು ಕಂಡುಕೊಳ್ಳಲಾಗುತ್ತಿದೆ' ಎಂದು ಸಚಿವ ಲಿಂಬಾವಳಿ ಅವರು ನುಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.