ADVERTISEMENT

ಲಾರಿ ಡಿಕ್ಕಿ: ಅಧಿಕಾರಿ ಸಾವು

​ಪ್ರಜಾವಾಣಿ ವಾರ್ತೆ
Published 10 ಜನವರಿ 2012, 19:30 IST
Last Updated 10 ಜನವರಿ 2012, 19:30 IST

ಬೆಂಗಳೂರು: ಲಾರಿ ಡಿಕ್ಕಿ ಹೊಡೆದು ಖಾಸಗಿ ಬ್ಯಾಂಕ್ ವ್ಯವಸ್ಥಾಪಕರೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ನಗರದ ಮೈಸೂರು ರಸ್ತೆಯ ನಾಯಂಡನಹಳ್ಳಿ ಜಂಕ್ಷನ್ ಬಳಿ ಮಂಗಳವಾರ ಮಧ್ಯಾಹ್ನ ನಡೆದಿದೆ.

ಬನ್ನೇರುಘಟ್ಟ ರಸ್ತೆ ಸಮೀಪದ ಶಾಂತಿನಿಕೇತನ ಲೇಔಟ್ ನಿವಾಸಿ ಸತ್ಯನಾರಾಯಣ (53) ಮೃತಪಟ್ಟವರು. ಖಾಸಗಿ ಬ್ಯಾಂಕ್‌ನಲ್ಲಿ ವ್ಯವಸ್ಥಾಪಕರಾಗಿದ್ದ ಅವರು ಕಚೇರಿಯ ಕೆಲಸದ ನಿಮಿತ್ತ ದ್ವಿಚಕ್ರ ವಾಹನದಲ್ಲಿ ನಾಯಂಡನಹಳ್ಳಿ ಜಂಕ್ಷನ್ ಬಳಿ ಬಂದಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲಾರಿಯೊಂದು ಅವರ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ಕೆಳಗೆ ಬಿದ್ದ ಅವರ ಮೇಲೆ ಅದೇ ಲಾರಿಯ ಚಕ್ರ ಹರಿದಿದೆ. ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟರು ಎಂದು ಪೊಲೀಸರು ಹೇಳಿದ್ದಾರೆ.

ಚಾಲಕನನ್ನು ಬಂಧಿಸಿ ಲಾರಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಧನ
ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಗಳನ್ನು ಬಂಧಿಸಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಇಬ್ಬರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ.

ದೀಪಾಂಜಲಿ ನಗರದ ಜಿ.ಸುರೇಶ್ (25) ಮತ್ತು ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳಿಂದ 1,600 ರೂಪಾಯಿ ಹಣ ಮತ್ತು ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಯುವತಿಯರಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಕರೆದೊಯ್ದು ಇಟ್ಟಮಡು ಸಮೀಪದ ರಾಘವೇಂದ್ರ ಲೇಔಟ್‌ನ ಮನೆಯೊಂದರಲ್ಲಿ ಕೂಡಿ ಹಾಕಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಈ ಬಗ್ಗೆ ಮಾಹಿತಿ ಕಲೆ ಹಾಕಿ ಆ ಮನೆಯ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಯಿತು. ಆರೋಪಿಗಳ ವಿರುದ್ಧ ಸುಬ್ರಹ್ಮಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.