ADVERTISEMENT

ಲೋಕಾಯುಕ್ತರು ಇಂದು ಆಸ್ಪತ್ರೆಯಿಂದ ಬಿಡುಗಡೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2018, 20:24 IST
Last Updated 13 ಮಾರ್ಚ್ 2018, 20:24 IST
ಪಿ.ವಿಶ್ವನಾಥ ಶೆಟ್ಟಿ
ಪಿ.ವಿಶ್ವನಾಥ ಶೆಟ್ಟಿ   

ಬೆಂಗಳೂರು: ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಅವರು ಗುಣಮುಖರಾಗಿದ್ದು, ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ಎಂದಿನಂತೆ ಆಹಾರ ಸೇವಿಸುತ್ತಿರುವ ಅವರನ್ನು ಸೋಮವಾರವೇ ತೀವ್ರ ನಿಗಾ ಘಟಕದಿಂದ ವಿಶೇಷ ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು. ಎದೆ, ಹೊಟ್ಟೆ, ಕೈ, ತೊಡೆ ಸೇರಿ ದೇಹದ 11 ಕಡೆ ಚಾಕು ಇರಿತದಿಂದ ಆಗಿದ್ದ ಗಾಯಗಳು ವಾಸಿಯಾಗುತ್ತಿವೆ. ಅವರ ಆರೋಗ್ಯ ಸಹಜ ಸ್ಥಿತಿಗೆ ಮರಳುತ್ತಿದೆ ಎಂದು ಹೃದ್ರೋಗ ತಜ್ಞ ಡಾ.ದಿವಾಕರ್‌ ಭಟ್‌ ‘ಪ್ರಜಾವಾಣಿ’ಗೆ ತಿಳಿಸಿದರು.‌

ಲೋಕಾಯುಕ್ತರನ್ನು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ADVERTISEMENT

ನಂತರ ಸುದ್ದಿಗಾರರ ಜತೆ ಮಾತನಾಡಿದ ಗೌಡರು, ‘ಘಟನೆ ನಡೆದ 10 ನಿಮಿಷದಲ್ಲಿ ವಿಶ್ವನಾಥ್‌ ಶೆಟ್ಟಿ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಹೀಗಾಗಿ, ಅಪಾಯದಿಂದ ಪಾರಾಗಿದ್ದಾರೆ’ ಎಂದರು.

‘ಗೃಹ ಇಲಾಖೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸ್ತಕ್ಷೇಪ ಮಾಡುತ್ತಿದ್ದಾರೆ. ಗೃಹ ಸಚಿವರಿಗೆ ಸ್ವತಂತ್ರವಾಗಿ ಕೆಲಸ ಮಾಡಲು ಬಿಡುತ್ತಿಲ್ಲ. ದೇಶದಲ್ಲಿ ಮೊದಲ ಬಾರಿಗೆ ಇಂಥ ದುರ್ಘಟನೆ ‌ನಡೆದಿದೆ’ ಎಂದರು.

‘ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ಯಾರದ್ದೋ ಹಿಡಿತದಲ್ಲಿ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಹಿಡಿತದಲ್ಲಿಯೂ ಅವರಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.