ADVERTISEMENT

ಲೋಕಾಯುಕ್ತ ಬಲೆಗೆ ವಿಕ್ಟೋರಿಯಾ ಆಸ್ಪತ್ರೆ ವೈದ್ಯ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2011, 19:30 IST
Last Updated 4 ಮಾರ್ಚ್ 2011, 19:30 IST

ಬೆಂಗಳೂರು: ವ್ಯಕ್ತಿಯೊಬ್ಬರಿಗೆ ಅಂಗವಿಕಲ ಪ್ರಮಾಣಪತ್ರ ನೀಡಲು ಒಂದು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವಿಕ್ಟೋರಿಯಾ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಸಿದ್ದೇಶ್ವರ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಮಧ್ಯಾಹ್ನ ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಶಿವಮೊಗ್ಗ ಮೂಲದ ನಾಗರಾಜ್ ಎಂಬ ವಿದ್ಯುತ್ ಗುತ್ತಿಗೆದಾರರು 2006ರಲ್ಲಿ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅಂಗವಿಕಲ ಪ್ರಮಾಣಪತ್ರ ಪಡೆಯಲು ವಿಕ್ಟೋರಿಯಾ ಆಸ್ಪತ್ರೆಗೆ ಅರ್ಜಿ ಸಲ್ಲಿಸಿದ್ದರು. ಆದರೆ ಪ್ರಮಾಣ ಪತ್ರ ನೀಡಲು ರೂ 1,000 ಲಂಚ ನೀಡುವಂತೆ ಅಲ್ಲಿನ ಮುಖ್ಯ ವೈದ್ಯಾಧಿಕಾರಿ ಬೇಡಿಕೆ ಇಟ್ಟಿದ್ದರು.

ಮುಖ್ಯ ವೈದ್ಯಾಧಿಕಾರಿ ಲಂಚಕ್ಕೆ ಒತ್ತಾಯಿಸುತ್ತಿರುವ ಬಗ್ಗೆ ನಾಗರಾಜ್ ಬೆಂಗಳೂರು ನಗರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಗುರುವಾರ ಮಧ್ಯಾಹ್ನ ಆಸ್ಪತ್ರೆಯಲ್ಲೇ 1,000 ರೂಪಾಯಿ ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಿದ ಲೋಕಾಯುಕ್ತ ತನಿಖಾ ತಂಡ ಅವರನ್ನು ಬಂಧಿಸಿದೆ.

ಈ ಕುರಿತು ‘ಪ್ರಜಾವಾಣಿ’ ಜೊತೆ ಮಾತನಾಡಿದ ಬೆಂಗಳೂರು ನಗರ ಲೋಕಾಯುಕ್ತ ಎಸ್‌ಪಿ ಕೆ.ಮಧುಕರ ಶೆಟ್ಟಿ, ‘ಗುರುವಾರ ಮಧ್ಯಾಹ್ನ ವಿಕ್ಟೋರಿಯಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಸಿದ್ದೇಶ್ವರ ಅವರನ್ನು ನಮ್ಮ ಪೊಲೀಸರು ಬಂಧಿಸಿದ್ದರು. ಪ್ರಾಥಮಿಕ ಹಂತದ ತನಿಖೆ ಪೂರ್ಣಗೊಳಿಸಿ, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.