ಬೆಂಗಳೂರು: ನಗರದ ಸಿಟಿ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ನಡೆಯುವ ಬೃಹತ್ ಸಮಾವೇಶದಲ್ಲಿ ರಾಜ್ಯದ ವಿವಿಧ ಜಿಲ್ಲೆ- ತಾಲ್ಲೂಕುಗಳ ನೂರಾರು ವಕೀಲರು ಭಾಗವಹಿಸುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಮಾಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಶಂಕರ ಬಿದರಿ ಬೆಂಗಳೂರು ನಗರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಮಿಷನರ್, ಹೆಚ್ಚುವರಿ ಪೊಲೀಸ್ ಕಮಿಷನರ್, ಜಂಟಿ ಪೊಲೀಸ್ ಕಮಿಷನರ್ ಮತ್ತು ಡಿಸಿಪಿ ದರ್ಜೆಯ ಅಧಿಕಾರಿಗಳ ಸಭೆ ನಡೆಸಿದ ಬಿದರಿ ಮಾಹಿತಿ ಪಡೆದರು.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಎಲ್ಲ ರೀತಿಯ ಕ್ರಮ ಕೈಗೊಳ್ಳಿ. ಗರಿಷ್ಠ ಸಂಖ್ಯೆಯ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಿ. ಕಾನೂನು ಉಲ್ಲಂಘನೆ ಆದರೆ ಕಾನೂನಿ ರೀತಿ ಕ್ರಮ ಕೈಗೊಳ್ಳಿ ಎಂದು ಅವರು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ನಗರದ ಎಲ್ಲ ಡಿಸಿಪಿಗಳು, ಪ್ರತಿ ವಿಭಾಗದಿಂದ ಇಬ್ಬರು ಎಸಿಪಿಗಳು, ಒಂದು ವಿಭಾಗದಿಂದ ಹತ್ತು ಮಂದಿ ಇನ್‌ಸ್ಪೆಕ್ಟರ್‌ಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲು, ಕೆ.ಆರ್. ವೃತ್ತ, ಮೈಸೂರು ಬ್ಯಾಂಕ್ ವೃತ್ತ, ಹೈಕೋರ್ಟ್, ಮೆಯೊ ಹಾಲ್ ನ್ಯಾಯಾಲಯ ಮುಂತಾದೆಡೆ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜನೆ ಮಾಡಲು ನಗರ ಪೊಲೀಸರು ನಿರ್ಧರಿಸಿದ್ದಾರೆ.
ಸಿಟಿ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ವಕೀಲರು ಸೇರಿ ಸಭೆ ನಡೆಸುತ್ತಾರೆ. ಮೆರವಣಿಗೆ ನಡೆಸುವ ಬಗ್ಗೆ ಮಾಹಿತಿ ಇಲ್ಲ. ನಿಷೇಧಾಜ್ಞೆ ಜಾರಿಯಲ್ಲಿರುವ ಕಾರಣ ಮೆರವಣಿಗೆ, ಜಾಥಾಕ್ಕೆ ಅವಕಾಶ ಇಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಾಂಕೇತಿಕ ಪ್ರತಿಭಟನೆ: ಪೊಲೀಸರ ವಿರುದ್ಧ ವಕೀಲರು ಸುಳ್ಳು ದೂರು ದಾಖಲಿಸಿದ್ದಾರೆ ಎಂದು ಆರೋಪಿಸಿ ಶುಕ್ರವಾರ ಬೆಳಿಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆವರೆಗೆ ರಾಜ್ಯದ ಪೊಲೀಸರು ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುವ ಮೂಲಕ ಸಾಂಕೇತಿಕ ಪ್ರತಿಭಟನೆ ನಡೆಸುವುದಾಗಿ ರಾಜ್ಯ ಪೊಲೀಸ್ ಸಂಘವು ಪ್ರಕಟಣೆಯಲ್ಲಿ ತಿಳಿಸಿದೆ.
`ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುತ್ತಿರುವ ವಕೀಲರು, ನಮ್ಮ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿ ನ್ಯಾಯಾಧೀಶರ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ. ಇದನ್ನು ಖಂಡಿಸುತ್ತೇವೆ~ ಎಂದು ಸಂಘದ ಅಧ್ಯಕ್ಷರಾದ ಆಂತರಿಕ ಭದ್ರತೆ ವಿಭಾಗದ ಎಸ್‌ಪಿ ಎನ್.ನಾಗರಾಜ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.