ಬೆಂಗಳೂರು: ನಗರದ ವಿವಿಧ ಪ್ರದೇಶಗಳಿಗೆ ಮಂಗಳವಾರ ಭೇಟಿ ನೀಡಿದ ಉಪ ಲೋಕಾಯುಕ್ತ ಎಸ್. ಬಿ.ಮಜ್ಜಗೆ ಅವರು ಇನ್ನೊಂದು ವಾರದೊಳಗೆ ರಸ್ತೆಗಳ ಗುಂಡಿಗಳನ್ನು ಮುಚ್ಚುವಂತೆ ಹಾಗೂ ರಸ್ತೆಗಳ ಬದಿಯಲ್ಲಿ ಸಂಗ್ರಹವಾಗಿರುವ ತ್ಯಾಜ್ಯವನ್ನು ವಿಲೇವಾರಿ ಮಾಡುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಲಾಲ್‌ಬಾಗ್ ಸಮೀಪದ ಸಿದ್ದಯ್ಯ ರಸ್ತೆ, ಕೆ.ಆರ್.ರಸ್ತೆ, ಕೆ.ಜಿ.ರಸ್ತೆ, ಆರ್ಕಾಟ್ ಶ್ರೀನಿವಾಸಾಚಾರ್ ರಸ್ತೆ, ಬಿ.ವಿ.ಕೆ.ಅಯ್ಯಂಗಾರ್ ರಸ್ತೆ, ಅರಮನೆ ರಸ್ತೆ, ಗುಬ್ಬಿ ತೋಟದಪ್ಪ ರಸ್ತೆ, ಧನ್ವಂತ್ರಿ ರಸ್ತೆ, ಓಕಳಿಪುರ ಮುಖ್ಯರಸ್ತೆಗಳಿಗೆ ಭೇಟಿ ನೀಡಿದ ಮಜ್ಜಗೆ ಅವರು, ರಸ್ತೆಗಳಲ್ಲಿನ ಗುಂಡಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
`ರಸ್ತೆಗಳ ಗುಂಡಿಗಳನ್ನು ಒಂದು ವಾರದೊಳಗೆ ಮುಚ್ಚಲು ಬಿಬಿಎಂಪಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಮಳೆಗಾಲಕ್ಕೂ ಮುನ್ನ ರಸ್ತೆಗಳ ದುರಸ್ತಿ ಕಾರ್ಯಕ್ಕೆ ಬಿಬಿಎಂಪಿ ಮುಂದಾಗಬೇಕಿತ್ತು. ಆದರೆ, ಈ ವಿಚಾರದಲ್ಲಿ ಬಿಬಿಎಂಪಿ ಅಧಿಕಾರಿಗಳು ವಿಫಲರಾಗಿದ್ದಾರೆ. ಗುಂಡಿಗಳಿಂದ ಹೆಚ್ಚು ಅನಾಹುತವಾಗದಂತೆ ಮೊದಲು ಗುಂಡಿಗಳನ್ನು ಮುಚ್ಚಬೇಕು.
ಮಳೆಗಾಲದ ನಂತರ ರಸ್ತೆಗಳ ಸಂಪೂರ್ಣ ನವೀಕರಣಕ್ಕೆ ಬಿಬಿಎಂಪಿ ಮುಂದಾಗಬೇಕು' ಎಂದು ಅವರು ಸೂಚಿಸಿದರು. ಕೆ.ಜಿ.ರಸ್ತೆಯಲ್ಲಿ ರಸ್ತೆ ಗುಂಡಿಗಳನ್ನು ಪರಿಶೀಲಿಸುವ ವೇಳೆ ಕಾವೇರಿ ಭವನದ ಎದುರಿನ ಸ್ಕೈವಾಕ್‌ನ ಲಿಫ್ಟ್ ಕಾರ್ಯನಿರ್ವಹಿಸದೇ ಇರುವುದನ್ನು ಗಮನಿಸಿದ ಅವರು, `ಹತ್ತು ದಿನಗಳೊಳಗೆ ಲಿಫ್ಟ್ ದುರಸ್ತಿಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು' ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆ.ಆರ್.ಮಾರುಕಟ್ಟೆ ಸಮೀಪದ ಆರ್ಕಾಟ್ ಶ್ರೀನಿವಾಸಾಚಾರ್ ರಸ್ತೆ ಬದಿಯಲ್ಲಿ ಸಂಗ್ರಹವಾಗಿರುವ ಕಸದ ರಾಶಿಯನ್ನು ನಾಳೆ ಸಂಜೆಯೊಳಗೆ ವಿಲೇವಾರಿ ಮಾಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು. `ಒಂದು ವಾರದೊಳಗೆ ನಗರದ ರಸ್ತೆಗಳ ಗುಂಡಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳಲಾಗುವುದು. ರಸ್ತೆ ಬದಿಗಳಲ್ಲಿ ಸಂಗ್ರಹವಾಗಿರುವ ತ್ಯಾಜ್ಯವನ್ನು ಆದಷ್ಟು ಬೇಗ ವಿಲೇವಾರಿ ಮಾಡಲಾಗುವುದು' ಎಂದು ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮೀನಾರಾಯಣ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.