ADVERTISEMENT

ವಾರ್ಡ್ ಮೀಸಲು: ಕಾಲಾವಕಾಶ ಕೋರಿಕೆ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2012, 19:59 IST
Last Updated 17 ಡಿಸೆಂಬರ್ 2012, 19:59 IST

ಬೆಂಗಳೂರು: ಏಳು ಮಹಾನಗರ ಪಾಲಿಕೆಗಳೂ ಸೇರಿದಂತೆ 209 ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿಯನ್ನು ಅಂತಿಮಗೊಳಿಸಲು ಎರಡು ವಾರ ಕಾಲಾವಕಾಶ ನೀಡುವಂತೆ ಕೋರಿ ರಾಜ್ಯ ಸರ್ಕಾರ ಸೋಮವಾರ ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ.

ಈ ಹಿಂದೆ ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಒಪ್ಪಿಕೊಂಡಂತೆ ವಾರ್ಡ್‌ವಾರು ಮೀಸಲಾತಿ ಪಟ್ಟಿಯನ್ನು ಅಂತಿಮಗೊಳಿಸಿ ಸೋಮವಾರದ ಒಳಗೆ ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕಿತ್ತು. ಆದರೆ, ಕರಡು ಪಟ್ಟಿಗೆ 2,500ಕ್ಕೂ ಹೆಚ್ಚು ಆಕ್ಷೇಪಣೆಗಳು ಸಲ್ಲಿಕೆಯಾದ ಕಾರಣದಿಂದ ಅವುಗಳ ವಿಲೇವಾರಿಗೆ ಕಾಲಾವಕಾಶ ಕೋರಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಸೋಮವಾರ ವಿವರವಾದ ಪ್ರಮಾಣಪತ್ರವನ್ನು ಸಲ್ಲಿಸಿರುವ ಸರ್ಕಾರ, ಪಟ್ಟಿಯನ್ನು ಅಂತಿಮಗೊಳಿಸಲು ಎರಡು ವಾರ ಕಾಲಾವಕಾಶ ನೀಡುವಂತೆ ಹೈಕೋರ್ಟ್‌ಗೆ ಮನವಿ ಮಾಡಿದೆ.

ಮೀಸಲಾತಿಯ ಕರಡು ಪಟ್ಟಿಗೆ ಸಲ್ಲಿಕೆಯಾಗಿರುವ ಆಕ್ಷೇಪಣೆಗಳನ್ನು ವಿಲೇವಾರಿ ಮಾಡಲು ಹೆಚ್ಚು ಸಮಯದ ಅಗತ್ಯವಿದೆ. ಪಟ್ಟಿಯನ್ನು ಅಂತಿಮಗೊಳಿಸಿದ ಬಳಿಕ ಅಧಿಸೂಚನೆ ಪ್ರಕಟಿಸಬೇಕು. ಆ ಬಳಿಕವೇ ರಾಜ್ಯ ಚುನಾವಣಾ ಆಯೋಗಕ್ಕೆ ಅಂತಿಮ ಪಟ್ಟಿಯನ್ನು ಸಲ್ಲಿಸಬೇಕಾಗುತ್ತದೆ. ಈ ಕಾರಣಗಳನ್ನೂ ಪರಿಗಣಿಸಿ ಕಾಲಾವಕಾಶ ನೀಡಬೇಕೆಂದು ರಾಜ್ಯ ಸರ್ಕಾರ ಪ್ರಮಾಣಪತ್ರದಲ್ಲಿ ಕೋರಿದೆ ಎನ್ನಲಾಗಿದೆ.

2001ರ ಜನಗಣತಿ ಆಧಾರದಲ್ಲಿ ಪಟ್ಟಿ ಸಿದ್ಧಪಡಿಸುವುದರಿಂದ ವಿವಿಧ ನಗರ ಸ್ಥಳೀಯ ಸಂಸ್ಥೆಗಳು ಮುಂದೆ ಎದುರಿಸಬಹುದಾದ ತೊಡಕುಗಳ ಬಗ್ಗೆಯೂ ಪ್ರಮಾಣಪತ್ರದಲ್ಲಿ ಸೂಕ್ಷ್ಮ,ವಾಗಿ ಪ್ರಸ್ತಾಪಿಸಲಾಗಿದೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.