ADVERTISEMENT

ವಿದ್ಯಾವಂತರಿಂದಲೇ ನಿಯಮ ಉಲ್ಲಂಘನೆ ಹೆಚ್ಚು: ಸಲೀಂ

​ಪ್ರಜಾವಾಣಿ ವಾರ್ತೆ
Published 22 ಜನವರಿ 2016, 19:51 IST
Last Updated 22 ಜನವರಿ 2016, 19:51 IST
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಲಾ ಮಕ್ಕಳು ಸಂಚಾರ ಪೊಲೀಸ್ ಸಿಬ್ಬಂದಿಗೆ ಗುಲಾಬಿ ನೀಡಿ ಸ್ವಾಗತಿಸಿದರು – ಪ್ರಜಾವಾಣಿ ಚಿತ್ರ
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಲಾ ಮಕ್ಕಳು ಸಂಚಾರ ಪೊಲೀಸ್ ಸಿಬ್ಬಂದಿಗೆ ಗುಲಾಬಿ ನೀಡಿ ಸ್ವಾಗತಿಸಿದರು – ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಪ್ರಜ್ಞಾಪೂರ್ವಕವಾಗಿಯೇ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಿದ್ಯಾವಂತರು, ಅನಾಗರಿಕರಂತೆ ವರ್ತಿಸುತ್ತಿದ್ದಾರೆ’ ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಡಾ.ಎಂ.ಎ. ಸಲೀಂ ಹೇಳಿದರು.

ಪೌರಪ್ರಜ್ಞೆಗಾಗಿ ಮಕ್ಕಳ ಚಳವಳಿ (ಸಿಎಂಸಿಎ) ಸಂಸ್ಥೆ ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ 11ನೇವರ್ಷದ ‘ಸಂಚಾರ ಪೊಲೀಸ್ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸಿಎಂಸಿಎ ಆಯೋಜಿಸಿರುವ ಈ ಕಾರ್ಯಕ್ರಮ ಜನರು ಮತ್ತು ಪೊಲೀಸರು ಮುಖಾಮುಖಿಗೆ ವೇದಿಕೆಯಾಗಿದೆ. ಆ ಮೂಲಕ ಅವರಜತೆ ಬೆರೆತು ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಲು ಅವಕಾಶ ಕಲ್ಪಿಸಿದೆ’ ಎಂದರು.

ಪರಿಸರವಾದಿ ಮತ್ತು ಸಿಎಂಸಿಎ ಟ್ರಸ್ಟಿ ಯಲ್ಲಪ್ಪರೆಡ್ಡಿ ಮಾತನಾಡಿ, ‘ಮಕ್ಕಳಲ್ಲಿ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವುದರಿಂದ, ಭವಿಷ್ಯದಲ್ಲಿ ನಿಯಮಗಳ ಉಲ್ಲಂಘನೆ ತಗ್ಗಲಿದೆ’ ಎಂದು ಅವರು ಅಭಿಪ್ರಾಯಪಟ್ಟರು.

‘ಮಕ್ಕಳು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕಾದರೆ ಅವರಿಗೆ ಈ ದೇಶದ ಕಾನೂನು ಸೇರಿದಂತೆ ಹಲವು ವಿಷಯಗಳ ಬಗ್ಗೆ ಅರಿವು ಮೂಡಿಸಬೇಕು. ಆಗ ಅವರು ಸಮಾಜದ ಆಸ್ತಿಯಾಗುತ್ತಾರೆ’ ಎಂದು ಅವರು ಹೇಳಿದರು.

ಸಿಎಂಸಿಎಯ ವೃಂದಾ ಭಾಸ್ಕರ್, ‘ನಾಗರಿಕರ ಸುರಕ್ಷತೆ ಮತ್ತು ಸುಗಮ ಸಂಚಾರ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಸಂಸ್ಥೆ ಕಳೆದ 11 ವರ್ಷದಿಂದ ಸಂಚಾರ ಪೊಲೀಸ್ ದಿನಾಚರಣೆ ಆಚರಿಸಿಕೊಂಡು ಬರುತ್ತಿದೆ’ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಸಂಚಾರ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.

ಏನಿದು ಸಿಎಂಸಿಎ?: ಬೆಂಗಳೂರು ಮೂಲದ ಸರ್ಕಾರೇತರ ಸಂಸ್ಥೆಯಾದ ಸಿಎಂಸಿಎ ಕಳೆದ 15 ವರ್ಷದಿಂದ ಕಾರ್ಯನಿರ್ವಹಿಸುತ್ತಿದೆ. ದೇಶದ 11 ನಗರಗಳಲ್ಲಿ ಸಕ್ರಿಯವಾಗಿರುವ ಸಂಸ್ಥೆ, ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಒಟ್ಟು 700 ಪೌರ ಕ್ಲಬ್‌ಗಳನ್ನು ಸ್ಥಾಪಿಸುವ ಮೂಲಕ, ಮಕ್ಕಳಲ್ಲಿ ನಾಗರಿಕ ಪ್ರಜ್ಞೆ ಮೂಡಿಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.