ಬೆಂಗಳೂರು: ಬೆಂಗಳೂರು ನಗರದಲ್ಲಿನ ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಸ್.ಕೆ.ಪಟ್ನಾಯಕ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದು, ಅದು ತಿಂಗಳಿಗೊಮ್ಮೆ ಸಭೆ ಸೇರಲಿದೆ ಎಂದು ಎಂದು ವಿಧಾನಸಭೆಯ ದೂರುಗಳ ಸಮಿತಿ ಅಧ್ಯಕ್ಷರೂ ಆದ ಉಪಸಭಾಧ್ಯಕ್ಷ ಎನ್.ಎಚ್.ಶಿವಶಂಕರರೆಡ್ಡಿ ಶುಕ್ರವಾರ ಇಲ್ಲಿ ತಿಳಿಸಿದರು.
ನಗರದಲ್ಲಿನ ಸಂಚಾರ ದಟ್ಟಣೆ, ಕುಡಿಯುವ ನೀರು, ಒಳಚರಂಡಿ, ರಸ್ತೆ ಅವ್ಯವಸ್ಥೆ ಇತ್ಯಾದಿ ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ವಿಪರೀತ ದೂರುಗಳು ಬರುತ್ತಿದ್ದು, ಆ ಹಿನ್ನೆಲೆಯಲ್ಲಿ ರೆಡ್ಡಿ ಅವರು ಬಿಬಿಎಂಪಿ, ಬಿಡಿಎ, ಜಲಮಂಡಲಿ ಸೇರಿದಂತೆ ಸಂಬಂಧಪಟ್ಟ ಎಲ್ಲ ಇಲಾಖೆಗಳ ಮುಖ್ಯಸ್ಥರ ಸಭೆ ಕರೆದಿದ್ದರು. ಈ ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಹಾಜರಿದ್ದರು.
ಬೆಂಗಳೂರು ಬೃಹದಾಕಾರವಾಗಿ ಬೆಳೆದ ಹಾಗೆ ಸಮಸ್ಯೆಗಳು ಕೂಡ ಹೆಚ್ಚಾಗುತ್ತಿವೆ. ಅವುಗಳನ್ನು ನಿಭಾಯಿಸಲು ಸಮನ್ವಯದ ಕೊರತೆ ಇರುವುದು ಸ್ಪಷ್ಟವಾಗಿದ್ದು, ಕಾಲಕಾಲಕ್ಕೆ ಸಭೆಗಳನ್ನು ನಡೆಸುವ ಮೂಲಕ ಜನಸ್ನೇಹಿ ಆಡಳಿತ ನೀಡಬೇಕು ಎಂದರು.
ಪ್ರತಿ ತಿಂಗಳು ಪಟ್ನಾಯಕ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಮೂರು ತಿಂಗಳಿಗೊಮ್ಮೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಮತ್ತೊಂದು ಸಭೆ ನಡೆಯಲಿದೆ. ಈ ಸಭೆಗಳಲ್ಲಿ ಸಮನ್ವಯದ ಕೊರತೆ ನೀಗಿಸುವ ಬಗ್ಗೆ ಚರ್ಚೆಯಾಗಲಿದೆ. ಯಾವ ಸಂಸ್ಥೆ ಯಾವ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ? ಅದಕ್ಕೆ ಇತರ ಸಂಸ್ಥೆಗಳ ಸಹಕಾರ ಬೇಕೇ ಇತ್ಯಾದಿ ವಿಷಯಗಳ ಬಗ್ಗೆ ಸಭೆಗಳಲ್ಲಿ ಚರ್ಚೆಯಾಗಬೇಕು. ಆಮೂಲಕ ಗೊಂದಲ ನಿವಾರಿಸಿಕೊಳ್ಳಬಹುದು ಎಂದು ಅವರು ಹೇಳಿದರು.
ಸಮಿತಿ ಸದಸ್ಯರಾದ ಸುರೇಶಕುಮಾರ್, ಅಖಂಡ ಶ್ರೀನಿವಾಸ್ ಸೇರಿದಂತೆ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.