ADVERTISEMENT

ವಿವಿಧ ಸಂಘಟನೆಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಮೇ 2012, 19:30 IST
Last Updated 29 ಮೇ 2012, 19:30 IST

ಬೆಂಗಳೂರು: ಪೆಟ್ರೋಲ್ ದರ ಹೆಚ್ಚಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿ ವಿವಿಧ ಜನಪರ ಸಂಘಟನೆಗಳ ಸದಸ್ಯರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರದ ಪುರಭವನದ ಮುಂದೆ ಪ್ರತಿಭಟನೆ ಮಾಡಿದ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಕಾರ್ಯಕರ್ತರು `ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಾಗದಿದ್ದರೂ ತೈಲೋತ್ಪನ್ನ ಕಂಪೆನಿಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಪೆಟ್ರೋಲ್ ದರವನ್ನು ಹೆಚ್ಚಿಸಿದೆ. ಇದರಿಂದ ಜನ ಸಾಮಾನ್ಯರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ~ ಎಂದು ದೂರಿದರು.

`ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದಾಗ 40 ರೂ ಇದ್ದ ಪೆಟ್ರೋಲ್ ದರ ಈಗ ಎರಡರಷ್ಟಾಗಿದೆ. ತೈಲ ಕಂಪೆನಿಗಳ ಹಿತ ಕ್ಕಾಗಿ ಕೇಂದ್ರ ಜನ ವಿರೋಧಿ ನೀತಿ ಅನುಸರಿಸುತ್ತಿರುವುದು ಖಂಡನೀಯ~ ಎಂದು ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿಗಣಿ ಶಂಕರ್ ಆರೋಪಿಸಿದರು.

`ಜನ ಸಾಮಾನ್ಯರಿಗೆ ಹೊರೆಯಾಗಿರುವ ಪೆಟ್ರೋಲ್ ದರ ಏರಿಕೆ ನೀತಿಯನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು~ ಎಂದು ಆಗ್ರಹಿಸಿ ಬಿಜೆಪಿ ಯುವಮೋರ್ಚಾದ ಕಾರ್ಯಕರ್ತರು ನಗರದ ಆನಂದ್‌ರಾವ್ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಬೈಕ್‌ಗಳನ್ನು ತಳ್ಳುವ ಮೂಲಕ ಪ್ರತಿಭಟನೆ ಮಾಡಿದರು.

`ಈಗಾಗಲೇ ಆಹಾರ ಪದಾರ್ಥಗಳು ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ಸಾಮಾನ್ಯರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇಂತಹ ಸ್ಥಿತಿಯಲ್ಲಿ ಕೇಂದ್ರ ಪೆಟ್ರೋಲ್ ದರ ಹೆಚ್ಚಿಸಿ ಜನ ಸಾಮಾನ್ಯರನ್ನು ಮತ್ತಷ್ಟು ಸಂಕಷ್ಟಕ್ಕೀಡು ಮಾಡಿದೆ~ ಎಂದು ನಗರ ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಗಣೇಶ್ ಆಕ್ರೋಶ
ವ್ಯಕ್ತಪಡಿಸಿದರು.

`ರಾಜ್ಯ ಸರ್ಕಾರ ಕೂಡಲೇ ಪೆಟ್ರೋಲ್ ಮೇಲೆ ವಿಧಿಸಿರುವ ಎಲ್ಲಾ ರೀತಿಯ ತೆರಿಗೆಯನ್ನು ಹಿಂಪಡೆಯಬೇಕು~ ಎಂದು ಒತ್ತಾಯಿಸಿ ಎಐಎಡಿಎಂಕೆ ಕಾರ್ಯಕರ್ತರು ಎಂ.ಜಿ.ರಸ್ತೆಯ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡಿದರು. ಕಳೆದ ಮೂರು ವರ್ಷದಲ್ಲಿ 18 ಬಾರಿ ಪೆಟ್ರೋಲ್ ದರ ಹೆಚ್ಚಿಸುವ ಮೂಲಕ ಕೇಂದ್ರ ಸರ್ಕಾರ ದಾಖಲೆ ನಿರ್ಮಿಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.