ADVERTISEMENT

ವಿಶ್ವನಾಥ್ ವಿರುದ್ಧ ವಿಚಾರಣೆ: ಸ್ಪೀಕರ್ ನಕಾರ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2012, 20:59 IST
Last Updated 26 ಡಿಸೆಂಬರ್ 2012, 20:59 IST

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ-1988ರ ಅಡಿ ವಿಚಾರಣೆ ಆರಂಭಿಸಲು ಅನುಮತಿ ಕೋರಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಪ್ರಸ್ತಾವವನ್ನು ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ ತಿರಸ್ಕರಿಸಿದ್ದಾರೆ.

ಅಲ್ಲಾಳಸಂದ್ರ ನಿವಾಸಿ ಶಶಿಧರ್ ಸಲ್ಲಿಸಿದ್ದ ಖಾಸಗಿ ದೂರಿನ ಆರೋಪಗಳ ಕುರಿತು ತನಿಖೆ ನಡೆಸುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು. ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಶಾಸಕರು 7.74 ಕೋಟಿ ರೂಪಾಯಿ ಅಕ್ರಮ ಆಸ್ತಿ ಹೊಂದಿರುವುದು ಪತ್ತೆಯಾಗಿದೆ ಎಂದು ಆಗಸ್ಟ್ 4ರಂದು ವರದಿ ಸಲ್ಲಿಸಿದ್ದರು.

ವಿಶ್ವನಾಥ್ ವಿರುದ್ಧ ವಿಚಾರಣೆಗೆ ಅನುಮತಿ ನೀಡುವಂತೆ ಅದೇ ದಿನ ಸ್ಪೀಕರ್ ಅವರಿಗೆ ಪ್ರಸ್ತಾವ ಸಲ್ಲಿಸಿದ್ದರು.ಮೂರು ತಿಂಗಳಿಗೂ ಹೆಚ್ಚು ಕಾಲದಿಂದ ಈ ಪ್ರಸ್ತಾವ ಸ್ಪೀಕರ್ ಬಳಿಯೇ ಇತ್ತು.ಕೆಲ ದಿನಗಳ ಹಿಂದೆ ಅದನ್ನು ತಿರಸ್ಕರಿಸಿ ಆದೇಶ ಹೊರಡಿಸಿದ್ದಾರೆ.ಶಾಸಕರ ವಿರುದ್ಧ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ವರದಿಯಲ್ಲಿ ವಿಚಾರಣೆಗೆ ಅನುಮತಿ ನೀಡಲು ಪೂರಕವಾಗುವಂತಹ ಅಂಶಗಳು ಇಲ್ಲ ಎಂಬ ಅಭಿಪ್ರಾಯವನ್ನು ಸ್ಪೀಕರ್ ಆದೇಶದಲ್ಲಿ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.