ADVERTISEMENT

ವೇತನ ಹೆಚ್ಚಳಕ್ಕೆ ಮನವಿ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2011, 19:55 IST
Last Updated 22 ಫೆಬ್ರುವರಿ 2011, 19:55 IST

ಬೆಂಗಳೂರು: ಪದವಿ, ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಬೋಧಕರ ವೇತನವನ್ನು ಜಾಸ್ತಿ ಮಾಡಿರುವ ಹಾಗೆ ಪದವಿಪೂರ್ವ ಉಪನ್ಯಾಸಕರ ವೇತನವನ್ನು ಹೆಚ್ಚಿಸಬೇಕು ಎಂದು ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣ ಅಧಿಕಾರಿಗಳ, ಪ್ರಾಂಶುಪಾಲರ ಹಾಗೂ ಬೋಧಕೇತರರ ಒಕ್ಕೂಟ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ.

ಕಳೆದ ಏಪ್ರಿಲ್‌ನಲ್ಲಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾಂಕೇತಿಕವಾಗಿ ಮೂರು ಗಂಟೆಗಳ ಕಾಲ ಮೌಲ್ಯಮಾಪನವನ್ನು ಸ್ಥಗಿತಗೊಳಿಸಿ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆಗ ವೇತನ ನಿಗದಿಯಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಭರವಸೆ ನೀಡಿದ್ದರು. ಆದರೆ ಇದುವರೆಗೆ ಬೇಡಿಕೆಯನ್ನು ಈಡೇರಿಸಿಲ್ಲ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಿ.ಕೆ.ಶ್ರೀರಾಮ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪದವಿ, ಎಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಬೋಧಕರಿಗೆ ಹೋಲಿಸಿದರೆ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ವೇತನ ತುಂಬಾ ಕಡಿಮೆ ಇದೆ. ಅಷ್ಟೇ ಅಲ್ಲದೆ ಪಕ್ಕದ ರಾಜ್ಯಗಳಲ್ಲಿಯೂ  ಹೆಚ್ಚಿನ ಸಂಬಳವಿದೆ. ಆದ್ದರಿಂದ ಪಾಲಿಟೆಕ್ನಿಕ್ ಉಪನ್ಯಾಸಕರಿಗೆ ನೀಡಿರುವ ಹಾಗೆ 21,600 ರೂಪಾಯಿ ಮೂಲ ವೇತನವನ್ನು ನಿಗದಿ ಮಾಡಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.