ADVERTISEMENT

ವೈದ್ಯಕೀಯ ಕ್ಷೇತ್ರ: ಆಸಕ್ತಿ ವಹಿಸಲು ಮಹಿಳೆಯರಿಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2013, 19:59 IST
Last Updated 22 ಏಪ್ರಿಲ್ 2013, 19:59 IST

ಬೆಂಗಳೂರು: ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯಕೀಯ ಕ್ಷೇತ್ರದ ಕಡೆಗೆ ಗಮನ ಹರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕ ಡಾ.ಧನ್ಯ ಕುಮಾರ್ ಹೇಳಿದರು.

ಆದರ್ಶ ಸಮೂಹ ಸಂಸ್ಥೆಯು ಇತ್ತೀಚೆಗೆ ಎಸ್‌ಆರ್‌ಎನ್ ಆದರ್ಶ ಕಾಲೇಜಿನಲ್ಲಿ ಆಯೋಜಿಸಿದ್ದ `ಸುಸ್ಥಿರ ಭವಿಷ್ಯವನ್ನು ಸಾಧಿಸುವಲ್ಲಿ ಮಹಿಳೆಯರ ಪಾತ್ರ' ಕುರಿತು ಅಂತರರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಿ  ಮಾತನಾಡಿದರು.

ಸ್ತ್ರೀಯರು ಎಲ್ಲ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತ ಅಭಿವೃದ್ಧಿ ಹೊಂದುವ ಕಡೆಗೆ ಗಮನ ಹರಿಸಬೇಕು. ಆಗ ಮಾತ್ರ ಮಹಿಳೆಯರು ತಮ್ಮನ್ನು ತಾವು ಸಾಬೀತು ಮಾಡಲು ಸಾಧ್ಯವಾಗುತ್ತದೆ ಎಂದರು.

ರಾಜಕೀಯವಾಗಿ ಮತ್ತು ಸಾಮಾಜಿಕವಾಗಿ ಬೆಳೆಯಲು ಮಹಿಳೆಯರು ಇಂದು ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಿತರಾಗಬೇಕು ಮತ್ತು ಸದೃಢರಾಗಬೇಕು. ಎಲ್ಲ ಸವಾಲುಗಳನ್ನು ದಿಟ್ಟವಾಗಿ ಎದುರಿಸಬೇಕು. ಆಗ ಸಮಾಜ ಅವರನ್ನು ಗುರುತಿಸುತ್ತದೆ ಎಂದರು.

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕ ಡಾ. ಮುದ್ದುಮೋಹನ್ ಮಾತನಾಡಿ, ಮಹಿಳೆಯರ ಅಭಿವೃದ್ಧಿಗೆ ಸರ್ಕಾರವು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ. ಅವುಗಳಲ್ಲಿ ಮಹಿಳೆಯರಿಗೆ ಶಾಪವಾಗಿರುವ ದೇವದಾಸಿ ಪದ್ಧತಿಯನ್ನು ನಿರ್ಮೂಲನ ಮಾಡಲು ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿದೆ. ದೇವದಾಸಿ ಪದ್ಧತಿಯಿಂದ ಹೊರಬಂದ ಅನೇಕ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.