ADVERTISEMENT

ವೈದ್ಯರ ಗ್ರಾಮೀಣ ಸೇವೆ: ಹೊಸ ಕಾಯ್ದೆ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2012, 19:40 IST
Last Updated 1 ಫೆಬ್ರುವರಿ 2012, 19:40 IST

ಬೆಂಗಳೂರು: ರಾಜ್ಯದಲ್ಲಿ ವೈದ್ಯಕೀಯ ಪದವಿ ಪಡೆಯುವವರು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸುವುದನ್ನು ಕಡ್ಡಾಯಗೊಳಿಸುವ ಬಿಗಿಯಾದ ಕಾಯ್ದೆಯೊಂದನ್ನು ತರಲು ಸರ್ಕಾರ ಯೋಚಿಸಿದೆ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಬುಧವಾರ ವಿಧಾನ ಪರಿಷತ್‌ಗೆ ತಿಳಿಸಿದರು.

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಜೆ.ಬಿ.ಸಿಂಡ್ರೋಮ್ ಕಾಯಿಲೆ ಕಾಣಿಸಿಕೊಂಡಿರುವ ಬಗ್ಗೆ ಕಾಂಗ್ರೆಸ್‌ನ ವೀರಣ್ಣ ಮತ್ತಿಕಟ್ಟಿ ಅವರು ಶೂನ್ಯ ವೇಳೆಯಲ್ಲಿ ಮಾಡಿದ ಪ್ರಸ್ತಾಪಕ್ಕೆ ಮುಖ್ಯಮಂತ್ರಿಯವರು ಉತ್ತರ ನೀಡಿದರು. ಜೋಯಿಡಾ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರೇ ಇಲ್ಲದಿರುವ ಬಗ್ಗೆ ಕಾಂಗ್ರೆಸ್‌ನ ಶ್ರೀಕಾಂತ ಘೋಟ್ನೇಕರ ಅವರು, ತಕ್ಷಣ ವೈದ್ಯರನ್ನು ನೇಮಕ ಮಾಡುವಂತೆ ಒತ್ತಾಯಿಸಿದರು.

ಆಗ ಪ್ರತಿಕ್ರಿಯಿಸಿದ ಸದಾನಂದ ಗೌಡ ಅವರು, `ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸಲು ವೈದ್ಯರು ಹಿಂದೇಟು ಹಾಕುತ್ತಿದ್ದಾರೆ. ಜೋಯಿಡಾದಲ್ಲಿ ಇದ್ದ ಒಬ್ಬ ವೈದ್ಯರ ಮೇಲೆ ಸ್ಥಳೀಯ ಜಿಲ್ಲಾ ಪಂಚಾಯಿತಿ ಸದಸ್ಯರೊಬ್ಬರು ಹಲ್ಲೆ ನಡೆಸಿದ್ದರಿಂದ ಅವರು ಸರ್ಕಾರಿ ಸೇವೆಗೆ ರಾಜೀನಾಮೆ ನೀಡಿದ್ದಾರೆ. ಇಂತಹ ಬೆಳವಣಿಗೆಗಳಿಗೆ ಕಡಿವಾಣ ಹಾಕಬೇಕು. ಅದರ ಜೊತೆಯಲ್ಲೇ ವೈದ್ಯರ ಗ್ರಾಮೀಣ ಸೇವೆ ಕಡ್ಡಾಯವನ್ನು ಬಿಗಿಗೊಳಿಸಲು ಹೊಸ ಕಾಯ್ದೆ ತರುವ ಉದ್ದೇಶವಿದೆ~ ಎಂದರು.

ಜೆ.ಬಿ.ಸಿಂಡ್ರೋಮ್ ಕಾಯಿಲೆಗೆ ಜಿಲ್ಲಾ ಆಸ್ಪತ್ರೆಗಳು ಮತ್ತು ಸರ್ಕಾರಿ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಲಭ್ಯವಿದೆ. ಬೆಂಗಳೂರಿನ ನಿಮ್ಹಾನ್ಸ್‌ನಲ್ಲೂ ಚಿಕಿತ್ಸೆ ನೀಡುವ ವ್ಯವಸ್ಥೆ ಇದೆ. ರೋಗಿಗಳಿಗೆ ತುರ್ತು ಪ್ರಯಾಣಕ್ಕೆ ಸರ್ಕಾರದ ವತಿಯಿಂದ ಆಂಬುಲೆನ್ಸ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.