ಬೆಂಗಳೂರು: ‘ವೈದ್ಯಕೀಯ ವಿದ್ಯಾರ್ಥಿಗಳಿಗೆ ಪಠ್ಯವಿಷಯದ ಜತೆಗೆ ರೋಗಿಗಳ ತಪಾಸಣೆ, ಚಿಕಿತ್ಸೆ ನೀಡಿಕೆಯಂತಹ ಅಭ್ಯಾಸಕ್ಕೆ (ಕ್ಲಿನಿಕಲ್ ಟೆಸ್ಟ್) ಹೆಚ್ಚಿನ ಅವಕಾಶ ನೀಡುವತ್ತ ಗಂಭೀರ ಚಿಂತನೆ ನಡೆಯಬೇಕಿದೆ’ ಎಂದು ಭಾರತೀಯ ವೈದ್ಯಕೀಯ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯೆ ಡಾ. ಸೀತಾ ನಾಯಕ್ ಹೇಳಿದರು.
ಕೆಂಪೇಗೌಡ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಂಸ್ಥಾಪನಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದರು. ‘ದೇಶದಲ್ಲಿ 314 ವೈದ್ಯಕೀಯ ಕಾಲೇಜುಗಳಲ್ಲಿ 34,000 ವೈದ್ಯಕೀಯ ಪದವಿ ಹಾಗೂ 16,000 ಸ್ನಾತಕೋತ್ತರ ವೈದ್ಯಕೀಯ ಸೀಟುಗಳಿವೆ. ಸಮೀಕ್ಷೆಯೊಂದರ ಪ್ರಕಾರ ದೇಶದಲ್ಲಿ ಪ್ರತಿ 1,700 ಮಂದಿಗೆ ಒಬ್ಬ ವೈದ್ಯರಿದ್ದಾರೆ. ಈ ಅಂತರ ಕಡಿಮೆ ಮಾಡುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕಿದೆ’ ಎಂದರು. ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ಕೆಂಚಪ್ಪಗೌಡ, ಖಜಾಂಚಿ ಎನ್.ರಮೇಶ್, ಕಿಮ್ಸ್ ಆಡಳಿತ ಮಂಡಳಿ ಅಧ್ಯಕ್ಷ ಸಿ. ಮಂಜುನಾಥ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.