ADVERTISEMENT

ಶಾಸಕ ಸೇರಿ ಪ್ರತಿಷ್ಠಿತರು ಭಾಗಿ

ರಾಮೋಹಳ್ಳಿ: ಜಮೀನು ಅಕ್ರಮ ಹಂಚಿಕೆ ಆರೋಪ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2013, 19:59 IST
Last Updated 1 ಆಗಸ್ಟ್ 2013, 19:59 IST

ಬೆಂಗಳೂರು:`ಬೆಂಗಳೂರು ದಕ್ಷಿಣ ತಾಲ್ಲೂಕಿನ ರಾಮೋಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ರೂ 200 ಕೋಟಿಗೂ ಹೆಚ್ಚಿನ ಮೌಲ್ಯದ ಸರ್ಕಾರಿ ಜಮೀನನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ' ಎಂದು ರಾಮೋಹಳ್ಳಿಯ ಕಾಂಗ್ರೆಸ್ ಮುಖಂಡ ಹೇಮಂತರಾಜು ಆಪಾದಿಸಿದರು.

ಗುರುವಾರ ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮೋಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾಳಗೊಂಡನಹಳ್ಳಿ, ಭೀಮನಕುಪ್ಪೆ, ಚಳ್ಳೇಘಟ್ಟ ಗ್ರಾಮಗಳ ವ್ಯಾಪ್ತಿಯ 65 ಸರ್ವೆ ನಂಬರ್‌ಗಳಲ್ಲಿ 1,226 ಎಕರೆ ಸರ್ಕಾರಿ ಜಮೀನು ಇದೆ. ಇದರಲ್ಲಿ ಸ.ನಂ. 26 ಒಂದರಲ್ಲಿಯೇ 202 ಎಕರೆ ಜಮೀನು ಅಕ್ರಮವಾಗಿ ಹಂಚಿಕೆಯಾಗಿದೆ ಎಂದು ದೂರಿದರು.

ವಿಧಾನ ಪರಿಷತ್ ಸದಸ್ಯ ಡಿ.ಎಸ್. ವೀರಯ್ಯ ಅವರ ಪತ್ನಿ ಎಸ್.ರಾಜೇಶ್ವರಿ ಅವರಿಗೆ 4 ಎಕರೆ, ಮಾಜಿ ಸಚಿವ ಸಿ.ಚೆನ್ನಿಗಪ್ಪ ಅವರ ಸಂಬಂಧಿ ಎಂ.ಆರ್.ಲಕ್ಷ್ಮಣಪ್ಪ 12 ಎಕರೆ ಸೇರಿದಂತೆ ವಿವಿಧ ಪಕ್ಷಗಳ ರಾಜಕಾರಣಿಗಳು, ಪ್ರತಿಷ್ಠಿತ ವ್ಯಕ್ತಿಗಳು ಸಹ ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.

ಈ ಕುರಿತು ಸದನದಲ್ಲಿ ಕಾಂಗ್ರೆಸ್ ಶಾಸಕ ಎಸ್.ಟಿ.ಸೋಮಶೇಖರ್ ಅವರು ಭೂ ಅಕ್ರಮದ ಬಗ್ಗೆ ಕೇಳಿದ ಪ್ರಶ್ನೆಗೆ ಕಂದಾಯ ಸಚಿವರು ಸರಿಯಾದ ಉತ್ತರ ನೀಡಿಲ್ಲ.  ಗ್ರಾಮ ಲೆಕ್ಕಾಧಿಕಾರಿಗಳು, ತಹಶೀಲ್ದಾರ್ ಹಾಗೂ ಕಂದಾಯ ಅಧಿಕಾರಿಗಳು ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಅಕ್ರಮ ಹಂಚಿಕೆ ಕುರಿತು ಶೀಘ್ರವೇ ತನಿಖೆ ನಡೆಸಬೇಕು.

ಅಕ್ರಮವಾಗಿ ಹಂಚಿಕೆ ಮಾಡಲಾದ ಜಮೀನನ್ನು ವಶಪಡಿಸಿಕೊಳ್ಳಬೇಕು. ಸಮಗ್ರ ತನಿಖೆ ನಡೆಸುವಂತೆ ಕೋರಿ ಮುಂದಿನ ದಿನಗಳಲ್ಲಿ ಕಾನೂನು ರೀತಿಯ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT