ADVERTISEMENT

ಶಿಕ್ಷಣದಿಂದ ಮಹಿಳಾ ಸಬಲೀಕರಣ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2012, 19:30 IST
Last Updated 15 ಮಾರ್ಚ್ 2012, 19:30 IST

ಬೆಂಗಳೂರು: ಅಸಮಾನತೆ, ಬಡತನ, ಮಹಿಳೆಯರ ಮೇಲಾಗುವ ದೌರ್ಜನ್ಯ, ಬಾಲ್ಯ ವಿವಾಹಗಳಂತಹ ಸಾಮಾಜಿಕ ಪಿಡುಗುಗಳನ್ನು ನಿವಾರಿಸಲು ಸರ್ಕಾರಿ ಹಾಗೂ ಸರ್ಕಾರೇತರ ಸಂಸ್ಥೆಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವುದು ಅವಶ್ಯವಾಗಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ  ಎಸ್.ವಿ.ರಂಗನಾಥ್ ಅಭಿಪ್ರಾಯಪಟ್ಟರು.

ಮಹಿಳಾ ಸಬಲೀಕರಣ ರಾಷ್ಟ್ರೀಯ ಮಿಷನ್, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಹಾಗೂ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಂಯುಕ್ತ ಆಶ್ರಯದಲ್ಲಿ ಗುರುವಾರ ಏರ್ಪಡಿಸಿದ್ದ ದಕ್ಷಿಣ ಪ್ರಾದೇಶಿಕ ವಿಭಾಗದ ಎರಡು ದಿನಗಳ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳಾ ಸಬಲೀಕರಣ ಸಾಧಿಸಲು ಗ್ರಾಮೀಣ ಮಹಿಳೆಯರಿಗೆ ಶಿಕ್ಷಣ ಒದಗಿಸುವತ್ತ ಹೆಚ್ಚು ಮುತುವರ್ಜಿ ವಹಿಸುವುದು ಅವಶ್ಯವಾಗಿದೆ ಎಂದರು.

ಹೆಣ್ಣು ಮಕ್ಕಳಿಗೆ ಶಿಕ್ಷಣ ಒದಗಿಸುವ ವಿವಿಧ ಹಂತಗಳಾದ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲಾ ಹಂತದಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸುವುದು ಅತ್ಯಂತ ಅವಶ್ಯವಾಗಿದೆ ಎಂದ ಅವರು, ಮಹಿಳಾ ಸಬಲೀಕರಣಕ್ಕೆ ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಭಾಗ್ಯಲಕ್ಷ್ಮಿ ಬಾಂಡ್, ಬೈಸಿಕಲ್ ವಿತರಣೆ, ದೇವದಾಸಿಯರಿಗೆ ಪುನರ್ವಸತಿ ಕಾರ್ಯಕ್ರಮ, ಉನ್ನತ ಶಿಕ್ಷಣ ಪಡೆಯಲು ಬ್ಯಾಂಕ್‌ಗಳ ಸಾಲ ಸೌಲಭ್ಯದಿಂದಾಗುವ ಪ್ರಯೋಜನಗಳ ಬಗ್ಗೆ ವಿವರಿಸಿದರು.

ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಅಲ್ಲದೆ ಮಹಿಳೆಯರ ಸಂರಕ್ಷಣೆಗಾಗಿ ಅನೇಕ ಕಾಯ್ದೆ ಕಾನೂನುಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸರಿಯಾಗಿ ಅನುಷ್ಠಾನಗೊಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.

ಸಮ್ಮೇಳನದ ಉದ್ದೇಶದ ಬಗ್ಗೆ ವಿವರಿಸಿದ ಮಹಿಳಾ ಸಬಲೀಕರಣದ ರಾಷ್ಟ್ರೀಯ ಮಿಷನ್‌ನ ವ್ಯವಸ್ಥಾಪಕ ನಿರ್ದೇಶಕ ಎನ್. ಸನ್ಯಾಲ್, ದೇಶದ 18 ರಾಜ್ಯಗಳಲ್ಲಿ ರಾಷ್ಟ್ರೀಯ ಮಿಷನ್ ಕಾರ್ಯನಿರ್ವಹಿಸುತ್ತಿದ್ದು, ಸಮಾಜದಲ್ಲಿ ಮಹಿಳೆಯರಿಗೆ ರಕ್ಷಣೆ ಒದಗಿಸುವತ್ತ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.
ಎನ್.ಎಂ.ಇ.ಡಬ್ಲ್ಯೂ. ನಿರ್ವಾಹಕ ನಿರ್ದೇಶಕಿ ರಶ್ಮಿ ಸಿಂಗ್, ಮಹಿಳೆಯರ ಮೇಲಾಗುವ ದೌರ್ಜನ್ಯ ಹಾಗೂ ತೊಂದರೆಗಳ ಪರಿಣಾಮ ವಿವರಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಮೇಶ್ ಬಿ.ಝಳಕಿ ಸ್ವಾಗತಿಸಿದರು. ಕರ್ನಾಟಕ, ಕೇರಳ, ತಮಿಳುನಾಡು, ಅಂಡಮಾನ್ ಮತ್ತು ನಿಕೋಬಾರ್, ಪಾಂಡಿಚೆರಿ ರಾಜ್ಯಗಳ ಅನೇಕ ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.