ADVERTISEMENT

ಶಿವಾಜಿನಗರದ ರಸೆಲ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅನಾಹುತ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2012, 19:30 IST
Last Updated 25 ಫೆಬ್ರುವರಿ 2012, 19:30 IST

ಬೆಂಗಳೂರು: ನಗರದ ಪಾರಂಪರಿಕ ಕಟ್ಟಡಗಳಲ್ಲಿ ಒಂದಾದ ಶಿವಾಜಿನಗರದ ರಸೆಲ್ ಮಾರುಕಟ್ಟೆ ಕಟ್ಟಡದಲ್ಲಿ ಶನಿವಾರ ನಸುಕಿನಲ್ಲಿ ಸಂಭವಿಸಿದ ಭಾರಿ ಅಗ್ನಿ ಅನಾಹುತದಲ್ಲಿ ಸುಮಾರು 123 ಅಂಗಡಿಗಳು ಸಂಪೂರ್ಣ ಸುಟ್ಟು ಹೋಗಿದ್ದು, ಕೋಟ್ಯಂತರ ರೂಪಾಯಿ ನಷ್ಟವಾಗಿದೆ.

ಮಾರುಕಟ್ಟೆಯ ಕಟ್ಟಡದ ನೆಲ ಮಹಡಿಯ ಹಿಂದಿನ ಸಾಲಿನ ಮಳಿಗೆಯೊಂದರಲ್ಲಿ ಬೆಳಗಿನ ಜಾವ 3.15ರ ಸುಮಾರಿಗೆ ಹೊತ್ತಿಕೊಂಡ ಬೆಂಕಿ ಕ್ಷಣ ಮಾತ್ರದಲ್ಲಿ ಅಕ್ಕಪಕ್ಕದ ಅಂಗಡಿಗಳಿಗೆ ವ್ಯಾಪಿಸಿದೆ. ನಂತರ ಕಟ್ಟಡದ ಒಂದನೇ ಅಂತಸ್ತಿಗೂ ಬೆಂಕಿ ವ್ಯಾಪಿಸಿದ್ದರಿಂದ ಮಳಿಗೆಗಳು ಧಗಧಗನೆ ಹೊತ್ತಿ ಉರಿಯಲಾರಂಭಿಸಿದವು.

ಬೆಂಕಿ ಹೊತ್ತಿಕೊಂಡಿರುವುದನ್ನು ನೋಡಿದ ಸ್ಥಳೀಯರು ಅಗ್ನಿಶಾಮಕ ನಿಯಂತ್ರಣ ಕೊಠಡಿಗೆ ನಾಲ್ಕು ಗಂಟೆ ಏಳು ನಿಮಿಷಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಆದರೆ, ಆ ವೇಳೆಗಾಗಲೇ ಮಾರುಕಟ್ಟೆಯ ಅರ್ಧದಷ್ಟು ಮಳಿಗೆಗಳು ಬೆಂಕಿಗೆ ಆಹುತಿಯಾಗಿದ್ದವು.

ವಿಷಯ ತಿಳಿದು 29 ಅಗ್ನಿನಂದಕ ವಾಹನಗಳಲ್ಲಿ ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಏಳು ತಾಸಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು. ಕಟ್ಟಡದ ಮತ್ತೊಂದು ಬದಿಯ ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ವ್ಯಾಪಿಸದಂತೆ ಎಚ್ಚರ ವಹಿಸಿದ ಅಗ್ನಿಶಾಮಕ ಸಿಬ್ಬಂದಿ ಹೆಚ್ಚಿನ ಅನಾಹುತ ತಪ್ಪಿಸಿದರು.

ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಆದರೆ ತರಕಾರಿ, ಹಣ್ಣು ಹಾಗೂ ಹೂವಿನ ಅಂಗಡಿಗಳಿಗೆ ಹಾನಿಯಾಗಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು, ಪೀಠೋಪಕರಣಗಳು ಮತ್ತು ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಹೋಗಿವೆ. ಅಗ್ನಿ ಅನಾಹುತದಲ್ಲಿ ಹಾನಿಗೊಳಗಾಗಿರುವ ಕಟ್ಟಡದ ಅರ್ಧ ಭಾಗ ಸಂಪೂರ್ಣ ಶಿಥಿಲಗೊಂಡಿದ್ದು, ಯಾವುದೇ ಸಮಯದಲ್ಲಿ ಬೀಳುವ ಹಂತ ತಲುಪಿದೆ.

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಜಿಪಿ ಎ.ಆರ್.ಇನ್ಫಂಟ್, ನಿರ್ದೇಶಕ ಬಿ.ಜಿ.ಚೆಂಗಪ್ಪ ಸೇರಿದಂತೆ ಇಲಾಖೆಯ ಹಲವು ಹಿರಿಯ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಚಿವ ಸಿ.ಪಿ.ಯೋಗೇಶ್ವರ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕಿ ಮೋಟಮ್ಮ, ಸಂಸದ ಪಿ.ಸಿ.ಮೋಹನ್, ಶಾಸಕ ಆರ್.ರೋಷನ್‌ಬೇಗ್, ಮೇಯರ್ ಪಿ.ಶಾರದಮ್ಮ, ಉಪ ಮೇಯರ್ ಎಸ್.  ಹರೀಶ್, ಬಿಬಿಎಂಪಿ ಆಯುಕ್ತ ಎಂ.ಕೆ.ಶಂಕರಲಿಂಗೇಗೌಡ, ನಗರ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ ಮತ್ತಿತರರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನೆ ಸಂಬಂಧ ಶಿವಾಜಿನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

1.21 ಕೋಟಿ ರೂಪಾಯಿ ಹಾನಿ

ರಸೆಲ್ ಮಾರುಕಟ್ಟೆಯಲ್ಲಿ ಶನಿವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಸುಮಾರು 1.21 ಕೋಟಿ ರೂಪಾಯಿಗಳಷ್ಟು ಹಾನಿ ಸಂಭವಿಸಿದೆ ಎಂದು ಬಿಬಿಎಂಪಿ ಅಂದಾಜು ಮಾಡಿದೆ.

ಈ ಘಟನೆಯಲ್ಲಿ ಒಟ್ಟು 123 ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ಇದರಿಂದ ಅಂಗಡಿ ಮಾಲೀಕರಿಗೆ 89,22,995 ರೂಪಾಯಿ ನಷ್ಟ ಸಂಭವಿಸಿದೆ. ಪಾಲಿಕೆ ಕಟ್ಟಡ ಹಾನಿಗೊಳಗಾಗಿರುವುದರಿಂದ 31.51 ಲಕ್ಷ ನಷ್ಟ ಉಂಟಾಗಿದೆ ಎಂದು ಬಿಬಿಎಂಪಿ ಆಯುಕ್ತ ಎಂ.ಕೆ. ಶಂಕರಲಿಂಗೇಗೌಡ ತಿಳಿಸಿದ್ದಾರೆ.

`ಪ್ರಜಾವಾಣಿ~ಯೊಂದಿಗೆ ಮಾತನಾಡಿದ ಅವರು, `ಶಾರ್ಟ್ ಸರ್ಕೀಟ್‌ನಿಂದ ಈ ಅನಾಹುತ ಸಂಭವಿಸಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಅಗ್ನಿ ಅನಾಹುತ ಸಂಭವಿಸಿದ ಮಳಿಗೆಯ ಮಾಲೀಕರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ವಿತರಿಸಲಾಗುವುದು~ ಎಂದ ಅವರು, `ಮಾರುಕಟ್ಟೆಯಲ್ಲಿರುವ ಹಣ್ಣು ತರಕಾರಿ ಮಳಿಗೆಗಳಲ್ಲಿ ಬೆಂಕಿ ಅನಾಹುತದ ಬಗ್ಗೆ ಎಚ್ಚರ ವಹಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ಅನಾಹುತ ನಡೆಯದಂತೆ ಮಳಿಗೆಯ ಮಾಲೀಕರು ಜಾಗೃತರಾಗಬೇಕು~ ಎಂದು ಮನವಿ ಮಾಡಿದರು.

50 ಸಾವಿರ ರೂಪಾಯಿ ಪರಿಹಾರ

ಬೆಂಗಳೂರು: `ಹಾನಿಗೊಳಗಾಗಿರುವ ಮಳಿಗೆಗಳ ಮಾಲೀಕರಿಗೆ ತಕ್ಷಣವೇ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುತ್ತದೆ. ಘಟನೆಯಲ್ಲಿ ಆಗಿರುವ ಒಟ್ಟಾರೆ ನಷ್ಟದ ಬಗ್ಗೆ ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಅಂದಾಜು ಮಾಡಿ ವರದಿ ನೀಡಿದ ನಂತರ ಪೂರ್ಣ ಪ್ರಮಾಣದಲ್ಲಿ ಪರಿಹಾರಧನ ನೀಡಲಾಗುತ್ತದೆ~ ಎಂದು ಸದಾನಂದಗೌಡ ಸುದ್ದಿಗಾರರಿಗೆ ತಿಳಿಸಿದರು.

ಅಗ್ನಿ ಅನಾಹುತದಿಂದ ನಷ್ಟ ಅನುಭವಿಸಿರುವ ವ್ಯಾಪಾರಿಗಳು ಆತಂಕಪಡುವ ಅಗತ್ಯವಿಲ್ಲ. ಅವರ ಹಿತರಕ್ಷಣೆಗೆ ಸರ್ಕಾರ ಮತ್ತು ಬಿಬಿಎಂಪಿ ಬದ್ಧವಾಗಿದೆ. ಅವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಣ ಬಿಡುಗಡೆಗೊಳಿಸಲಾಗುತ್ತದೆ.
 
ಅಲ್ಲದೇ ವ್ಯಾಪಾರಿಗಳ ವಹಿವಾಟಿಗೆ ತೊಂದರೆಯಾಗದಂತೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಈ ನಿಟ್ಟಿನಲ್ಲಿ ಭಾನುವಾರದಿಂದಲೇ ಕಾರ್ಯಪ್ರವೃತ್ತವಾಗುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಕಟ್ಟಡದ ಪಾರಂಪರಿಕ ಸೌಂದರ್ಯಕ್ಕೆ ಧಕ್ಕೆಯಾಗದಂತೆ ಪುನರ್ ನಿರ್ಮಾಣ ಕಾರ್ಯ ಕೈಗೊಳ್ಳುವುದು ಮತ್ತು ವ್ಯಾಪಾರಿಗಳ ಹಿತ ಕಾಯುವುದು ಸರ್ಕಾರದ ಮುಖ್ಯ ಆದ್ಯತೆ. ಹಾನಿಗೊಳಗಾಗಿರುವ ಕಟ್ಟಡದ ಒಳ ಭಾಗವನ್ನು ತೆರವುಗೊಳಿಸಿ ಆ ಭಾಗದಲ್ಲಿ ಹೊಸ ಕಟ್ಟಡ ನಿರ್ಮಿಸಲಾಗುತ್ತದೆ. ಕಟ್ಟಡ ಕಾಮಗಾರಿಯನ್ನು ಸದ್ಯದಲ್ಲೇ ಆರಂಭಿಸಲಾಗುತ್ತದೆ ಎಂದು ಸದಾನಂದಗೌಡ ಹೇಳಿದರು.

ರಸೆಲ್ ಮಾರುಕಟ್ಟೆಯಲ್ಲಿ ಬೆಂಕಿ ಹೊತ್ತಿಕೊಂಡಿರುವ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರಣ ಗೊತ್ತಾಗಿಲ್ಲ: `ಅಗ್ನಿ ಅನಾಹುತಕ್ಕೆ ಕಾರಣ ಏನೆಂದು ಗೊತ್ತಾಗಿಲ್ಲ. ಘಟನೆಯಲ್ಲಿ ಆಗಿರುವ ನಷ್ಟದ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ~ ಎಂದು ಬಿ.ಜಿ.ಚೆಂಗಪ್ಪ `ಪ್ರಜಾವಾಣಿ~ಗೆ ತಿಳಿಸಿದರು.

`ಹಿರಿಯ ಅಧಿಕಾರಿಗಳು ಸೇರಿದಂತೆ ಒಟ್ಟು 136 ಸಿಬ್ಬಂದಿಯನ್ನು ಕಾರ್ಯಾಚರಣೆಗೆ ಬಳಸಿಕೊಳ್ಳಲಾಯಿತು. ಅಲ್ಲದೇ ಇದೇ ಮೊದಲ ಬಾರಿಗೆ ಅತ್ಯಾಧುನಿಕ ಏರಿಯಲ್ ಲ್ಯಾಡರ್ ಫ್ಲಾಟ್‌ಫಾರ್ಮ್ ವಾಹನವನ್ನು ಬಳಸಿಕೊಂಡು ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು~ ಎಂದು ಹೇಳಿದರು.

ಕಟ್ಟಡದ ಹಿನ್ನೆಲೆ: ದೇಶದಲ್ಲಿ ಬ್ರಿಟೀಷರ ಆಳ್ವಿಕೆ ಇದ್ದ ಸಂದರ್ಭದಲ್ಲಿ 1927ರಲ್ಲಿ ರಸೆಲ್ ಮಾರುಕಟ್ಟೆ ಕಟ್ಟಡ ನಿರ್ಮಾಣಗೊಂಡಿತ್ತು. ಸುಮಾರು 85 ವರ್ಷಗಳಷ್ಟು ಹಳೆಯದಾದ ಈ ಕಟ್ಟಡದಲ್ಲಿ ಒಟ್ಟು 474 ಮಳಿಗೆಗಳಿದ್ದವು.
ಬಿಬಿಎಂಪಿ ಈ ಕಟ್ಟಡವನ್ನು ನಿರ್ವಹಣೆ ಮಾಡುತ್ತಿದ್ದು, ಮಳಿಗೆದಾರರು ಪಾಲಿಕೆಗೆ ಪ್ರತಿ ತಿಂಗಳು ಬಾಡಿಗೆ ಪಾವತಿಸುತ್ತಿದ್ದಾರೆ. ಕಟ್ಟಡದಲ್ಲಿ ಹಣ್ಣು, ತರಕಾರಿ, ಹೂವು, ಮಾಂಸ, ಮೀನು, ಕಿರಾಣಿ ಅಂಗಡಿಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.