ADVERTISEMENT

ಶೀಘ್ರ ಪೊಲೀಸ್ ಅಧಿಕಾರಿಗಳ ಸಭೆ: ಸಿಎಂ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2011, 19:30 IST
Last Updated 2 ಅಕ್ಟೋಬರ್ 2011, 19:30 IST

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಕಾನೂನು ಮತ್ತು ಸುವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ ಇನ್ನೆರಡು ಮೂರು ದಿನಗಳಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಭಾನುವಾರ ಇಲ್ಲಿ ತಿಳಿಸಿದರು.
 

ಹೈಕೋರ್ಟ್ ಮುಂಭಾಗ ವನ್ಯಜೀವಿ ಸಂರಕ್ಷಣಾ ನಡಿಗೆ ಜಾಥಾವನ್ನು ಉದ್ಘಾಟಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

`ವಿಧಾನಸೌಧದಲ್ಲಿ ಸಚಿವ ವಿ. ಸೋಮಣ್ಣ ಮೇಲೆ ನಡೆದ ಹಲ್ಲೆ ಹಾಗೂ ಬಿಬಿಎಂಪಿ ಸದಸ್ಯ ನಟರಾಜ್ ಹತ್ಯೆ ಪ್ರಕರಣಗಳಿಂದ ತಮ್ಮ ಮನಸ್ಸಿಗೆ ತುಂಬಾ ಬೇಸರವಾಗಿದೆ~ ಎಂದು ವಿಷಾದ ವ್ಯಕ್ತಪಡಿಸಿದರು.

`ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನಾಗರಿಕರು ನೆಮ್ಮದಿಯಿಂದ ಬದುಕುವಂತಹ ವಾತಾವರಣ ನಿರ್ಮಿಸಲು ಸರ್ಕಾರ ಬದ್ಧವಾಗಿದೆ~ ಎಂದು ಭರವಸೆ ನೀಡಿದರು.

`ಬೆಂಗಳೂರಿನ ಆಂತರಿಕ ಭದ್ರತೆಗಾಗಿ ಎರಡು ವಿಶೇಷ ವಿಭಾಗಗಳನ್ನು ಆರಂಭಿಸಲಾಗಿದೆ. ಭದ್ರತಾ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ~ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬರ- ಡಿಸಿ, ಸಿಇಒಗಳ ಸಭೆ: ಈ ನಡುವೆ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸದಾನಂದಗೌಡ, `ರಾಜ್ಯದಲ್ಲಿ ಕೆಲ ಜಿಲ್ಲೆಗಳಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಕುರಿತು ಚರ್ಚಿಸಿ ಪರಿಹಾರ ಕಾಮಗಾರಿ ಕೈಗೊಳ್ಳುವ ಬಗ್ಗೆ ನಗರದಲ್ಲಿ ಎಲ್ಲ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯನ್ನು ಸೋಮವಾರ ಕರೆಯಲಾಗಿದೆ~ ಎಂದು ತಿಳಿಸಿದರು.

`ಸಭೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ, ಬರ ಪೀಡಿತ ತಾಲ್ಲೂಕುಗಳ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಾಗುವುದು~ ಎಂದು ಹೇಳಿದರು. 

`ಲೋಕಾಯುಕ್ತ ನೇಮಕ ಪ್ರಕ್ರಿಯೆ ಕುರಿತು ಸದ್ಯದಲ್ಲೇ ಚರ್ಚೆ ನಡೆಯಲಿದ್ದು, ಗಡಿ ಬಿಡಿಯಲ್ಲಿ ನಾನೊಬ್ಬನೇ ನಿರ್ಧಾರ ತೆಗೆದುಕೊಂಡು ನೇಮಕ ಮಾಡಲು ಸಾಧ್ಯವಿಲ್ಲ. ಲೋಕಾಯುಕ್ತ ನೇಮಕ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿಯೇ ಪ್ರಕಟಿಸಲಾಗುವುದು~ ಎಂದು ಪ್ರತಿಕ್ರಿಯಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT