ADVERTISEMENT

ಶ್ರೀನಿವಾಸ್ ವಿರುದ್ಧ ದೂರು ದಾಖಲು

ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ ಆರೋಪ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2013, 19:38 IST
Last Updated 22 ಏಪ್ರಿಲ್ 2013, 19:38 IST

ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಅವರ ವಿರುದ್ಧ ಬಿಜೆಪಿ ಅಭ್ಯರ್ಥಿ ಎಂ.ಶ್ರೀನಿವಾಸ್ ಅವರು ಕರಪತ್ರ ಹಂಚುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಸೋಮವಾರ ದೂರು ದಾಖಲಿಸಿದ್ದಾರೆ.

ಈ ಆರೋಪವನ್ನು ತಳ್ಳಿಹಾಕಿರುವ ಶ್ರೀನಿವಾಸ್, ಪ್ರಚಾರ ಸಭೆಯ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಗಲಭೆ ನಡೆಸಿದ್ದಾರೆ ಎಂದು ಪ್ರತಿದೂರು ನೀಡಿದ್ದಾರೆ.

ಜಾಲಹಳ್ಳಿಯ ಪೂರ್ಣಾಪುರದ ಸುಬ್ರಹ್ಮಣ್ಯ ದೇವಾಲಯದ ಬಳಿ ಶ್ರೀನಿವಾಸ್ ಅವರು ಸೋಮವಾರ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಕೆಲವರು, ಮುನಿರತ್ನ ಅವರು ಚುನಾವಣಾಧಿಕಾರಿಗೆ ಬೆದರಿಕೆ ಹಾಕಿದ ವಿಷಯ ಮುದ್ರಿತವಾಗಿದ್ದ ಕರಪತ್ರಗಳನ್ನು ಹಂಚಿದ್ದಾರೆ. ಇದರಿಂದ ಅಸಮಾಧಾನಗೊಂಡ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆ ಕೂಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

`ಸಭೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಗಲಭೆ ನಡೆಸಿ, ಪ್ರಚಾರಕ್ಕೆ ಅಡ್ಡಿಪಡಿಸಿದರು. ಮುನಿರತ್ನ ಅವರ ವಿರುದ್ಧ ನಮ್ಮ ಪಕ್ಷದ ಕಾರ್ಯಕರ್ತರು ಯಾವುದೇ ಕರಪತ್ರ ಹಂಚಿಲ್ಲ. ಕರಪತ್ರ ಹಂಚಿದವರು ಯಾರು ಎಂಬುದೂ ಗೊತ್ತಿಲ್ಲ. ಪ್ರಚಾರಕ್ಕೆ ಅಡ್ಡಿಪಡಿಸಿದ ಸುಮಾರು 20 ಮಂದಿ ಕಾಂಗ್ರೆಸ್ ಕಾರ್ಯಕರ್ತರು ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ದೌರ್ಜನ್ಯ ಎಸಗಿದರು. ಅಲ್ಲದೇ ಕಾರ್ಯಕರ್ತರನ್ನು ತಳ್ಳಾಡಿ ಗಲಭೆ ಸೃಷ್ಟಿಸಿದರು. ಈ ಬಗ್ಗೆ ಠಾಣೆಗೆ ದೂರು ನೀಡಲಾಗಿದೆ' ಎಂದು ಶ್ರೀನಿವಾಸ್ `ಪ್ರಜಾವಾಣಿ'ಗೆ ತಿಳಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಮುನಿರತ್ನ, `ಶ್ರೀನಿವಾಸ್ ಮತ್ತವರ ಬೆಂಬಲಿಗರು ನನ್ನ ವಿರುದ್ಧ ಕರಪತ್ರಗಳನ್ನು ಹಂಚಿದ್ದಾರೆ. ಇದನ್ನು ಪ್ರಶ್ನಿಸಿದ ನಮ್ಮ ಕಾರ್ಯಕರ್ತರು ಈ ಬಗ್ಗೆ ಠಾಣೆಗೆ ದೂರು ಕೊಟ್ಟಿದ್ದಾರೆ. ಕರಪತ್ರ ಹಂಚಿದ ಬಗ್ಗೆ ಚುನಾವಣಾ ಆಯೋಗಕ್ಕೂ ದೂರು ನೀಡಲಾಗಿದೆ' ಎಂದು ಹೇಳಿದರು.

ಪ್ರಚಾರಕ್ಕೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಜಾಲಹಳ್ಳಿ ಪೊಲೀಸ್ ಠಾಣೆ ಎದುರು ಕೆಲಕಾಲ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ವಿಷಯ ತಿಳಿದು ಸ್ಥಳಕ್ಕೆ ಬಂದ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರತಿಭಟನಾಕಾರರ ಮನವೊಲಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ನೀಡಿರುವ ಎರಡೂ ದೂರುಗಳನ್ನು ಸ್ವೀಕರಿಸಿ ಪ್ರಕರಣ ದಾಖಲಿಸಲಾಗಿದೆ. ದೂರಿನ ಸಂಬಂಧ ಈವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಜಾಲಹಳ್ಳಿ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.