ಬೆಂಗಳೂರು: `ಕರ್ನಾಟಕ ನಾಗರಿಕ ಸೇವಾ ಖಾತರಿ ಕಾಯ್ದೆ~ (ಸಕಾಲ) ಜಾರಿಯು ರಾಜ್ಯದಲ್ಲಿ ಆಡಳಿತ ಸುಧಾರಣೆಯ ದಿಸೆಯಲ್ಲಿ ಒಂದು ಕ್ರಾಂತಿಕಾರಿ ಹೆಜ್ಜೆ. ಸರ್ಕಾರದ ವಿವಿಧ ಹಂತಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದಲ್ಲಿ ಶೇಕಡ 75ರಷ್ಟು ತಕ್ಷಣವೇ ಇಳಿಮುಖವಾಗಲು ಈ ಕಾಯ್ದೆ ಕಾರಣವಾಗಲಿದೆ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ವಿಶ್ವೇಶ್ವರಯ್ಯ ಗೋಪುರದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ `ಸಕಾಲ~ ಯೋಜನೆ ಅನುಷ್ಠಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, `ಕಾಲಬದ್ಧ ಮತ್ತು ಖಚಿತ ಸೇವೆಗಳನ್ನು ಒದಗಿಸುವುದೇ ಪಾರದರ್ಶಕ ಆಡಳಿತ. ನಾಗರಿಕ ಸೇವಾ ಖಾತರಿ ಕಾಯ್ದೆ ಅನುಷ್ಠಾನದ ಮೂಲಕ ನಾವು ಪಾರದರ್ಶಕ ಆಡಳಿತದಲ್ಲಿ ಬದ್ಧತೆ ಪ್ರಕಟಿಸಿದ್ದೇವೆ~ ಎಂದರು.
ಒಂದು ತಿಂಗಳ ಅವಧಿಯಲ್ಲಿ ಧಾರವಾಡ, ಔರಾದ್, ಚಿತ್ರದುರ್ಗ, ಪುತ್ತೂರು ತಾಲ್ಲೂಕುಗಳು ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಜಯನಗರ ಕಚೇರಿಯಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿ ಮಾಡಲಾಗಿತ್ತು. ಈ ಅವಧಿಯಲ್ಲಿ ಸ್ವೀಕರಿಸಲಾದ ಅರ್ಜಿಗಳಲ್ಲಿ ಶೇಕಡ 99.3ರಷ್ಟು ನಿಗದಿತ ಅವಧಿಯೊಳಗೆ ವಿಲೇವಾರಿ ಆಗಿವೆ. ಮಧ್ಯವರ್ತಿಗಳ ಹಾವಳಿ ತಡೆಯಲು ಅರ್ಜಿ ಭರ್ತಿ ಮಾಡುವುದಕ್ಕೂ ಸರ್ಕಾರವೇ ಸಹಾಯ ಕೇಂದ್ರಗಳ ಮೂಲಕ ನೆರವು ನೀಡುತ್ತಿದೆ ಎಂದು ಹೇಳಿದರು.
ಕಾರ್ಮಿಕ ಸಚಿವ ಬಿ.ಎನ್.ಬಚ್ಚೇಗೌಡ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್‌ನ ಸಭಾಪತಿ ಡಿ.ಎಚ್.ಶಂಕರಮೂರ್ತಿ,ಶಾಸಕರಾದ ಡಾ.ಡಿ.ಹೇಮಚಂದ್ರ ಸಾಗರ್, ಎಂ.ಕೃಷ್ಣಪ್ಪ (ಬೆಂಗಳೂರು ದಕ್ಷಿಣ), ನೆ.ಲ.ನರೇಂದ್ರಬಾಬು, ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ.ಜೈರಾಜ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.